ADVERTISEMENT

ರಾಘವೇಂದ್ರ, ಶಿವಕುಮಾರ ಅಮಾನತು

ಪಕ್ಷ ವಿರೋಧಿ ಚಟುವಟಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2013, 19:59 IST
Last Updated 8 ಏಪ್ರಿಲ್ 2013, 19:59 IST

ನವದೆಹಲಿ: ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರತಿನಿಧಿಸಿ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಪರ ಪ್ರಚಾರ ನಡೆಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪಕ್ಕೊಳಗಾಗಿರುವ ಬಿ.ವೈ. ರಾಘವೇಂದ್ರ ಹಾಗೂ ಶಿವಕುಮಾರ ಉದಾಸಿ ಅವರನ್ನು ಸೋಮವಾರ ಸಂಸದೀಯ ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

ಬಿಜೆಪಿ ಮುಖ್ಯ ಸಚೇತಕ ರಮೇಶ್ ಬೈಸ್ ಅವರು ಇಬ್ಬರೂ ಲೋಕಸಭಾ ಸದಸ್ಯರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. `ನೀವು ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಂತೆ ಮನವಿ ಮಾಡುತ್ತಿದ್ದೀರಿ. ಅನೇಕ ಸಲ ಬಿಜೆಪಿ ಪರ ಪ್ರಚಾರ ಮಾಡುವಂತೆ ಮನವಿ ಮಾಡಿದ ಬಳಿಕವೂ ಕೆಜೆಪಿ ಸಭೆಗೆ ಹೋಗುವುದನ್ನು ನಿಲ್ಲಿಸಿಲ್ಲ. ಇದು ಶಿಸ್ತು ಉಲ್ಲಂಘನೆ ಅಷ್ಟೇ ಅಲ್ಲ, ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ನಿಮ್ಮನ್ನು ಸಂಸದೀಯ ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ' ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಪುತ್ರ ಶಿವಕುಮಾರ ಉದಾಸಿ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಶಿವಮೊಗ್ಗ ಹಾಗೂ ಹಾವೇರಿ ಕ್ಷೇತ್ರಗಳಿಂದ ಆಯ್ಕೆ ಆಗಿದ್ದಾರೆ.

ಬಿಜೆಪಿ ಹಿಂದಿನ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ರಾಜೀನಾಮೆಗೆ ಮೊದಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಈ ಇಬ್ಬರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಿಫಾರಸು ಮಾಡಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷರ ಶಿಫಾರಸಿನ ಹಿನ್ನೆಲೆಯಲ್ಲಿ ರಾಘವೇಂದ್ರ ಮತ್ತು ಉದಾಸಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತಾದರೂ ಕ್ರಮ ಕೈಗೊಳ್ಳುವ ಗೋಜಿಗೆ ಹೋಗಿರಲಿಲ್ಲ. ಆದರೆ, ಇಬ್ಬರೂ ಬಹಿರಂಗವಾಗಿ ಕೆಜೆಪಿ ಸಭೆಗಳಲ್ಲಿ ಭಾಗವಹಿಸುತ್ತಿರುವುದರಿಂದ ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಯಿತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.