ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಏಳು ಅಪರಾಧಿಗಳನ್ನು ಬಿಡುಗಡೆಗೊಳಿಸುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಇಂದು ನೇತೃತ್ವದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ಮೋಹನ್ ಪರಾಸರನ್ ಅವರು ರಾಜೀವ್ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳ ಶಿಕ್ಷೆಯನ್ನು ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದ್ದನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯು ಮುಗಿಯುವವರೆಗೂ ತಮಿಳುನಾಡು ಸರ್ಕಾರ ಏಳು ಅಪರಾಧಿಗಳನ್ನು ಬಿಡುಗಡೆಗೊಳಿಸದಂತೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿಕೊಂಡರು.
ಪರಾಸರನ್ ಅವರ ಮನವಿಗೆ ಸ್ಪಂದಿಸಿದ ಪೀಠವು ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ತಡೆಯಾಜ್ಞೆ ನೀಡಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಜೀವಾವಧಿಗೆ ಪರಿವರ್ತಿಸಿದ ಮರುದಿನವೇ, ಇದೇ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ 23 ವರ್ಷಗಳಿಂದ ಕಾರಾಗೃಹದಲ್ಲಿರುವ ಎಲ್ಲ ಏಳು ಹಂತಕರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ತೀರ್ಮಾನಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.