ADVERTISEMENT

ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧೆ ಕೇವಲ ವಂದತಿ: ಸುಷ್ಮಾ ಸ್ವರಾಜ್‌

ಪಿಟಿಐ
Published 17 ಜೂನ್ 2017, 10:45 IST
Last Updated 17 ಜೂನ್ 2017, 10:45 IST
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್   

ನವದೆಹಲಿ: ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಂದುವರಿದಿರುವಾಗಲೇ ಆಡಳಿತಾರೂಢ ಎನ್‌ಡಿಎ ಅಂಗಳದಿಂದ ದಿನಕ್ಕೊಂದು ಹೊಸ ಸುದ್ದಿ ಹೊರಬೀಳುತ್ತಿದೆ.

ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಯಾರು ಎಂಬ ವಿಷಯ ಇನ್ನೂ ಜೀವಂತವಾಗಿರುವಾಗಲೇ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ನಾನು ರಾಷ್ಟ್ರಪತಿ ಸ್ಥಾನದ ಆಕಾಂಕ್ಷಿ ಎನ್ನುವುದು ಕೇವಲ ವದಂತಿ ಮಾತ್ರ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಇದುವರೆಗೂ ಯಾರ ಹೆಸರನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲವಾದರೂ ಸುಷ್ಮಾ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ. ಆದರೆ, ಬಿಜೆಪಿ ಮಾತ್ರ ಈ ಬಗ್ಗೆ ಎಲ್ಲಿಯೂ ಸುಳಿವು ಬಿಟ್ಟುಕೊಡದೆ ರಹಸ್ಯ ಕಾಪಾಡಿಕೊಂಡು ಬಂದ ಕಾರಣ ಕುತೂಹಲ ಮೂಡಿಸಿತ್ತು.

ADVERTISEMENT

‘ನಾನು ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆದರೆ, ನೀವು ದೇಶದ ಆಂತರಿಕ ವಿಷಯದ ಬಗ್ಗೆ ಕೇಳುತ್ತಿದ್ದೀರಿ’ ಎಂದು ವರದಿಗಾರರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಜುಲೈ17ರಂದು ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬುಧವಾರದಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 28ರ ವರೆಗೆ ಅವಕಾಶವಿದೆ. ಜುಲೈ 1ರವರೆಗೆ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಜತೆಗೆ ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳು ಪರಸ್ಪರ ಒಮ್ಮತದ ಅಭ್ಯರ್ಥಿಯನ್ನು ರಾಷ್ಟ್ರಪತಿ ಹುದ್ದೆ ಆಯ್ಕೆ ಮಾಡುವ ಕಸರತ್ತು ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.