ADVERTISEMENT

ರೆಡ್ಡಿದ್ವಯರ ಜಾಮೀನು ಅರ್ಜಿ ವಿಚಾರಣೆ 29ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ಹೈದರಾಬಾದ್,(ಐಎಎನ್‌ಎಸ್): ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿಯ ವಿಚಾರಣೆ ಮತ್ತೆ ಒಂದು ವಾರ ಕಾಲ ಮುಂದಕ್ಕೆ ಹೋಗಿದೆ.

ಆಂಧ್ರ ಪ್ರದೇಶದಲ್ಲಿ ತೆಲಂಗಾಣ ಚಳವಳಿ ಬಿರುಸುಗೊಂಡಿದ್ದು, ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದರಿಂದ, ಸಿಬಿಐ ವಿಶೇಷ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಈ ತಿಂಗಳ 29ಕ್ಕೆ ನಿಗದಿಪಡಿಸಿದೆ.

ಸಾಕ್ಷ್ಯ ನಾಶಕ್ಕೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಆಪಾದಿತರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿದ್ವಯರು ಹಾಗೂ ಇತರರನ್ನು ಪ್ರಶ್ನಿಸಬೇಕಾಗಿರುವುದರಿಂದ ಇನ್ನೂ 9 ದಿನಗಳ ಕಾಲ ಅವರ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಅದು ಈಗಾಗಲೇ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ.

ಶ್ರೀನಿವಾಸ ರೆಡ್ಡಿ ಒಬಿಸಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಎಂದಿಗೂ ಕಾರ್ಯ ನಿರ್ವಹಿಸಿರಲಿಲ್ಲ. ಬದಲಿಗೆ ನಿರ್ದೇಶಕರಾಗಿ ಎಲ್ಲ ದಾಖಲೆಗಳಿಗೆ ಸಹಿ ಹಾಕಿದ್ದಾರೆ ಮತ್ತು ಅವರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು ಎಂಬುದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.