ಲಖನೌ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ವಿವಾದಾಸ್ಪದ ಭೂ ಒಪ್ಪಂದಕ್ಕೆ ಸಂಬಂಧಿಸಿದ ವಿವರ ಬಹಳ ಗೌಪ್ಯವಾಗಿರುವುದರಿಂದ ಅದನ್ನು ಯಾರ ಜೊತೆಗೂ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಈ ಸಂಬಂಧ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ವಿಷಯ ತಿಳಿಸಿದೆ.
ರಾಬರ್ಟ್ ವಾದ್ರಾ ಭೂ ಒಪ್ಪಂದ ಸಂಬಂಧ ಲಖನೌ ಮೂಲದ ಸಾಮಾಜಿಕ ಕಾರ್ಯಕರ್ತ ನೂತನ್ ಠಾಕೂರ್ ಅವರು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಸಲ್ಲಿಸಿದ ಅರ್ಜಿಗೆ ಪ್ರಧಾನಿ ಕಚೇರಿ ಈ ಪ್ರತಿಕ್ರಿಯೆ ನೀಡಿದೆ.
ವಾದ್ರಾ ಭೂ ಒಪ್ಪಂದದ ಬಗ್ಗೆ `ಆಮ್ ಆದ್ಮಿ ಪಕ್ಷ'ದ ಮುಖಂಡ ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡು ಭೂ ಒಪ್ಪಂದದ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಠಾಕೂರ್ ಹೋದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಲಖನೌ ಸಂಚಾರಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ದಿನಪತ್ರಿಕೆಗಳಲ್ಲಿ ಬಂದ ವರದಿಗಳನ್ನು ಆಧಾರವಾಗಿಟ್ಟುಕೊಂಡು ಅರ್ಜಿದಾರರು ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಇದರಲ್ಲಿ ನಿಜಾಂಶವಿಲ್ಲ ಎಂದು ಕೇಂದ್ರ ಸರ್ಕಾರದ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯ ಠಾಕೂರ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಎಲ್ಲ ಕಡತಗಳು ಮತ್ತು ಅರ್ಜಿ ಸ್ವೀಕರಿಸಿದ ನಂತರ ಯಾವ ಕ್ರಮ ಜರುಗಿಸಲಾಗಿದೆ ಎನ್ನುವುದರ ಬಗ್ಗೆ ವಿವರಣೆ ನೀಡುವಂತೆ ಕೋರಿ ಠಾಕೂರ್ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.
ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಈ ಕುರಿತು ಮಾಹಿತಿ ಹಂಚಿಕೊಳ್ಳುವುದು ನ್ಯಾಯಾಂಗ ಉಲ್ಲಂಘನೆಯಾಗುತ್ತದೆ ಎಂದು ಪ್ರಧಾನಿ ಕಚೇರಿ ಆರಂಭದಲ್ಲಿ ಹೇಳಿತ್ತು. ಆದರೆ, ಠಾಕೂರ್ ಮಾಹಿತಿ ಹಕ್ಕು ಕಾಯ್ದೆಯಡಿ ಎರಡನೇ ಅರ್ಜಿ ಸಲ್ಲಿಸಿ, `ನ್ಯಾಯಾಲಯದಲ್ಲಿ ಈಗಾಗಲೇ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಮಾಹಿತಿ ಹಂಚಿಕೆಯಿಂದ ನ್ಯಾಯಾಂಗ ಉಲ್ಲಂಘನೆಯಾಗುವುದಿಲ್ಲ' ಎಂದು ತಿಳಿಸಿದ್ದರು.
`ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇದನ್ನು ಬಹಳ ಗೌಪ್ಯ ಪ್ರಕರಣವಾಗಿ ಪರಿಗಣಿಸಲಾಗಿದೆ' ಎಂದು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಉಪ ಕಾರ್ಯದರ್ಶಿ ಎಸ್.ಇ. ರಿಜ್ವಿ ಅವರು, ಠಾಕೂರ್ ಅವರ ಎರಡನೇ ಅರ್ಜಿಗೆ ಪ್ರತಿಕ್ರಿಯಿಸಿದ್ದರು.
ಬೃಹತ್ ರಿಯಲ್ ಎಸ್ಟೇಟ್ ಸಂಸ್ಥೆ ಡಿಎಲ್‌ಎಫ್ ಜೊತೆ ನಡೆದ ವಿವಾದಾಸ್ಪದ ಭೂ ಒಪ್ಪಂದದಲ್ಲಿ ರಾಬರ್ಟ್ ವಾದ್ರಾಗೆ ಲಾಭ ಮಾಡಿಕೊಡಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.