ADVERTISEMENT

ವಾದ್ರಾ ವಿರುದ್ಧ ಆರೋಪ: ಸರ್ಕಾರದ ಪ್ರತಿಕ್ರಿಯೆ ಬಯಸಿದ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2012, 9:00 IST
Last Updated 11 ಅಕ್ಟೋಬರ್ 2012, 9:00 IST
ವಾದ್ರಾ ವಿರುದ್ಧ ಆರೋಪ: ಸರ್ಕಾರದ ಪ್ರತಿಕ್ರಿಯೆ ಬಯಸಿದ ಕೋರ್ಟ್‌
ವಾದ್ರಾ ವಿರುದ್ಧ ಆರೋಪ: ಸರ್ಕಾರದ ಪ್ರತಿಕ್ರಿಯೆ ಬಯಸಿದ ಕೋರ್ಟ್‌   

ಲಕ್ನೊ (ಐಎಎನ್‌ಎಸ್): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ವಿರುದ್ದ ಸಾಮಾಜಿಕ ಕಾರ್ಯಕರ್ತ ಅರವಿಂದ ಕೇಜ್ರಿವಾಲ್ ಅವರು ಮಾಡಿರುವ ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ತನ್ನ ಪ್ರತಿಕ್ರಿಯೆ ತಿಳಿಸುವಂತೆ ಅಲಹಾಬಾದ್‌ ಹೈಕೋರ್ಟ್‌ನ ಲಕ್ನೊ ಪೀಠವು ಗುರುವಾರ ಕೇಂದ್ರ ಸರ್ಕಾರಕ್ಕೆ ಹೇಳಿದೆ.
 
ವಾದ್ರಾ ವಿರುದ್ಧ ಕೇಜ್ರಿವಾಲ್ ಅವರು ಮಾಡಿರುವ ಅವ್ಯವಹಾರ ಆರೋಪಗಳ ಸಂಪೂರ್ಣ ವಿಚಾರಣೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ್ತಿ ನೂತನ್ ಠಾಕೂರ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠವು ವಾದ್ರಾ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ  ಕೇಂದ್ರ ಸರ್ಕಾರದ ಅಭಿಪ್ರಾಯ ಬಯಸಿ ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿತು.

ವಾದ್ರಾ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಅಭಿಪ್ರಾಯ ಕೋರಿ ತಾವು ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ) ಪ್ರಧಾನ ಕಾರ್ಯದರ್ಶಿಯವರಿಗೆ ಕಳುಹಿಸಿದ ಪತ್ರಕ್ಕೆ ಇವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನೂತನ್ ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಕಳೆದ ವಾರ ಅರವಿಂದ್ ಕೇಜ್ರಿವಾಲ್ ಹಾಗೂ ಪ್ರಶಾಂತ್ ಭೂಷಣ್ ಅವರು ಡಿಎಲ್‌ಎಫ್ ನಿರ್ಮಾಣ ಸಂಸ್ಥೆ ಜತೆಗೂಡಿ ವಾದ್ರಾ ಅವರು ಭೂ ಖರೀದಿಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಸದ್ಯ ರಾಜಕೀಯ ಬಿರುಗಾಳಿಯನ್ನೆ ಎಬ್ಬಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.