ADVERTISEMENT

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 19 ಮೇ 2012, 19:30 IST
Last Updated 19 ಮೇ 2012, 19:30 IST

ಚಂಡೀಗಡ (ಪಿಟಿಐ):  ಹರಿಯಾಣದ ಸೋನೆಪತ್ ಜಿಲ್ಲೆಯ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಕ್ಯಾಂಪಸ್‌ನಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಾಲ್ವರು ದುಷ್ಕರ್ಮಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಕ್ಯಾಂಪಸ್‌ನ ಮೆಸ್ ಗುತ್ತಿಗೆದಾರನ ಸಹಚರ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಂಪಸ್ ಪಕ್ಕದಲ್ಲಿರುವ ಅಂಗಡಿಯಲ್ಲಿ ನೋಟ್ ಪುಸ್ತಕ ಖರೀದಿಸಲು ಹೊರಟಿದ್ದಾಗ ನಾಲ್ವರು ಯುವಕರು ತನ್ನನ್ನು ಬಲವಂತವಾಗಿ ಜೀಪಿಗೆ ತಳ್ಳಿದರು. ನಂತರ ಹತ್ತಿರದ ಹೊಲಕ್ಕೆ ಒಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದರು ಎಂದು 19 ವರ್ಷದ ವಿದ್ಯಾರ್ಥಿನಿ ದೂರು ನೀಡಿದ್ದಾಳೆ.

ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಮತ್ತೊಬ್ಬ ಆಪಾದಿತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಐಜಿಪಿ ಲೋಕ್ ಮಿತ್ತಲ್ ತಿಳಿಸಿದ್ದಾರೆ.

ಈ ಮಧ್ಯೆ  ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸೋನಿಪಥ್- ಗೊಹನ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ವಾರ್ಡನ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ದೂರು ನೀಡದಂತೆ ಒತ್ತಡ ಹೇರಲಾಗಿತ್ತು ಎಂದು ಆಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.