ADVERTISEMENT

ಶಾಸಕರಿಗೆ ಹೈಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:00 IST
Last Updated 13 ಸೆಪ್ಟೆಂಬರ್ 2011, 19:00 IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಏಳು ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪರ ಊರುಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ನಿರಾಕರಿಸುತ್ತಿರುವ ಆರೋಪ ಹೊತ್ತ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ.

ಶಿವಮೊಗ್ಗದ ಎಚ್.ದಾನಪ್ಪ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೂ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.

ಎಸ್ಸೆಸ್ಸೆಲ್ಸಿ ನಂತರದ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಈ ನಿಲಯವಿದೆ. ಆದರೆ ಇದರ ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಗೋಪಾಲಕೃಷ್ಣ ಅವರು ಸಾಗರದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಿದ್ದಾರೆ.
 
ತಮ್ಮ ಊರಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿ ಎನ್ನುವುದು ಅವರ ಆಸೆ. ನಿಯಮದ ಪ್ರಕಾರ ಪರ ಊರಿನವರಿಗೆ ಆದ್ಯತೆ ನೀಡಬೇಕು. ಆದರೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಶಾಸಕರು ಈ ರೀತಿ ಮಾಡುತ್ತಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ.

ಹಿಂದಿನ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವವರಿಗೆ ಇಲ್ಲಿ ಆದ್ಯತೆ ನೀಡಬೇಕು. ಆದರೆ, ಕನಿಷ್ಠ ಅಂಕ ಗಳಿಸಿದ ಹಾಗೂ ವಸತಿಗೃಹದಿಂದ ಕಡಿಮೆ ಅಂತರದ ಊರುಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಶೇ 35 ಅಂಕ ಪಡೆದಿರುವ ವಿದ್ಯಾರ್ಥಿಗಳು ಪ್ರವೇಶ ದೊರಕಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಆದರೆ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ದೂರದ ಊರುಗಳ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಎಚ್.ಎಸ್.ಕಲ್ಯಾಣಕುಮಾರ್ ವಾದಿಸಿದರು. ವಿಚಾರಣೆ ಮುಂದೂಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.