ADVERTISEMENT

ಶಿಂಧೆ, ಚಿದಂಬರಂ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 19:59 IST
Last Updated 24 ಜೂನ್ 2013, 19:59 IST
ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ
ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ   

ಹೈದರಾಬಾದ್: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಕುರಿತು ತಮ್ಮ ಹೇಳಿಕೆಗೆ ಬದ್ಧವಾಗದೇ ಜನತೆಗೆ ವಂಚನೆ ಎಸಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದ ಆದೇಶದ ಅನುಸಾರ, ಭಾರತೀಯ ದಂಡ ಸಂಹಿತೆಯ 420ನೇ (ವಂಚನೆ) ಪರಿಚ್ಛೇದದ ಅಡಿ ಹೈದರಾಬಾದ್ ಹೊರವಲಯದಲ್ಲಿರುವ ಎಲ್.ಬಿ.ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಶಿಂಧೆ ಹಾಗೂ ಚಿದಂಬರಂ ಅವರು ತೆಲಂಗಾಣ ರಾಜ್ಯ ರಚನೆ ಕುರಿತು ತಪ್ಪು ಹೇಳಿಕೆ ನೀಡಿ, ಜನರನ್ನು ವಂಚಿಸಿದ್ದಾರೆ ಎಂದು `ತೆಲಂಗಾಣ ಕಿರಿಯ ವಕೀಲರ ಸಂಘ'ದ ಸದಸ್ಯ ನರೇಶ್‌ಕುಮಾರ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ಬಗ್ಗೆ ನ್ಯಾಯಾಲಯ ಜ. 28ರಂದು ಆದೇಶ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿತ್ತು. ಆದರೆ ಈ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಠಾಣಾಧಿಕಾರಿಯನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದರು.

ಈ ಬೆಳವಣಿಗೆಯ ಬೆನ್ನಲ್ಲೇ ಪೊಲೀಸರು ಸೋಮವಾರ ಇಬ್ಬರು ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.