ನವದೆಹಲಿ (ಪಿಟಿಐ): ಒಬ್ಬ ಮಹಿಳೆ ಸೇರಿದಂತೆ ಐವರು ನ್ಯಾಯಮೂರ್ತಿಗಳು ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳಲಿದ್ದಾರೆ.
ಮೂವರು ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಶನಿವಾರ ಕಡತಗಳಿಗೆ ಸಹಿ ಹಾಕಿದ್ದಾರೆ. ನ್ಯಾಯಮೂರ್ತಿಗಳಾದ ಜೆ.ಎಸ್. ಕೇಹರ್, ರಂಜನಾ ದೇಸಾಯಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ. ಕೇಹರ್ ಅವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದರೆ, ದೇಸಾಯಿ ಅವರು ಬಾಂಬೆ ಹೈಕೋರ್ಟ್ ಮತ್ತು ಮುಖ್ಯೋಪಾಧ್ಯಾಯ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ. ಚೆಲ್ಮೇಶ್ವರ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸುವ ಬಗ್ಗೆ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಯವರು ಕಾನೂನು ಸಚಿವಾಲಯಕ್ಕೆ ಕಡತಗಳನ್ನು ಕಳುಹಿಸಿಕೊಡಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸದ್ಯ ಸುಪ್ರೀಂ ಕೋರ್ಟ್‌ನಲ್ಲಿ 47,000 ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. ಸುಪ್ರೀಂಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 31 ಇದ್ದು, ಸದ್ಯ 26 ನ್ಯಾಯಮೂರ್ತಿಗಳು ಮಾತ್ರ ಇದ್ದಾರೆ. ಇಬ್ಬರು ನ್ಯಾಯಮೂರ್ತಿಗಳು ಸೆಪ್ಟೆಂಬರ್ ಹಾಗೂ ಮತ್ತಿಬ್ಬರು ಅಕ್ಟೋಬರ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.