ADVERTISEMENT

ಸುಪ್ರೀಂ ಕೋರ್ಟ್‌ ಮೊರೆ ಹೋದ ಕನ್ನಡೇತರರು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 19:30 IST
Last Updated 13 ಮಾರ್ಚ್ 2018, 19:30 IST

ನವದೆಹಲಿ: ವೈದ್ಯಕೀಯ ಪಿ.ಜಿ. ಕೋರ್ಸ್‌ಗೆ ಸರ್ಕಾರಿ ಕೋಟಾದಡಿ ಪ್ರವೇಶ ನೀಡಲು ಕರ್ನಾಟಕ- ಮೂಲದವರಿರಬೇಕು ಹಾಗೂ 10 ವರ್ಷ ಕರ್ನಾಟಕದಲ್ಲೇ ಅಧ್ಯಯನ ಮಾಡಿರಬೇಕೆಂಬ ಮಾನದಂಡ ಅನುಸರಿಸುತ್ತಿರುವ ಕ್ರಮವನ್ನು ವಿರೋಧಿಸಿ 40ಕ್ಕೂ ಅಧಿಕ ಕನ್ನಡೇತರ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಡಾ.ಕೃತಿ ಲಖಿನಾ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ಯು.ಯು. ಲಲಿತ್ ಅವರನ್ನು ಒಳಗೊಂಡ ಪೀಠವು, ಪ್ರಕರಣದ ವಿಚಾರಣೆಯ ಕುರಿತು ಗುರುವಾರ ಪರಾಮರ್ಶೆ ನಡೆಸಲಾಗುವುದು ಎಂದು ಹೇಳಿತು.

ಪಿ.ಜಿ. ಕೋರ್ಸ್‌ ಪ್ರವೇಶ ಕುರಿತ ಮಾಹಿತಿ ಪುಸ್ತಿಕೆಯಲ್ಲಿ ಪ್ರಕಟಿಸಿರುವ ಅರ್ಹತಾ ಮಾನದಂಡಗಳು ಅಕ್ರಮ, ಅಸಂವಿಧಾನಿಕ ಹಾಗೂ ತಾರತಮ್ಯದಿಂದ ಕೂಡಿವೆ ಎಂದು ದೂರಿ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ಭಾರತೀಯ ವೈದ್ಯಕೀಯ ಮಂಡಳಿ ಮತ್ತು ರಾಜ್ಯ ಸರ್ಕಾರಕ್ಕೆ ಒದಗಿಸುವಂತೆ ನ್ಯಾಯಪೀಠ ಇದೇ ವೇಳೆ ಸೂಚಿಸಿತು.

ADVERTISEMENT

2018ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪಿ.ಜಿ. ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್‌ 10ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಪ್ರಕಾರ, ಕೇವಲ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯಲು ಅರ್ಹರು ಎಂದು ತಿಳಿಸಿದೆ ಎಂದು ಅರ್ಜಿದಾರರ ಪರ ವಕೀಲ ಅಮಿತ್‌ಕುಮಾರ್‌ ವಿವರಿಸಿದರು.

ಅರ್ಜಿದಾರರು ಕರ್ನಾಟಕದಲ್ಲೇ ವೈದ್ಯಕೀಯ ಪದವಿ ಪಡೆದಿದ್ದು, ನೀಟ್ ಪರೀಕ್ಷೆಯಲ್ಲೂ ತೇರ್ಗಡೆ ಹೊಂದಿದ್ದಾರೆ ಎಂದು ತಿಳಿಸಿದ ಅವರು, ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರಕಾರ ಪಿ.ಜಿ. ಕೋರ್ಸ್‌ಗಳಿಗೆ ಯಾವುದೇ ರೀತಿಯ ಮೀಸಲಾತಿ ಮಾನದಂಡ ಅನುಸರಿಸುವಂತಿಲ್ಲ ಎಂದರು.

ಪಿ.ಜಿ. ಕೋರ್ಸ್‌ಗಳ ಪ್ರವೇಶಕ್ಕಾಗಿ ಇದೇ 25ರಿಂದ ಏಪ್ರಿಲ್ 5ರವರೆಗೆ ಕೌನ್ಸೆಲಿಂಗ್ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.