ADVERTISEMENT

ಹೇಳಿಕೆಗೆ ಅವಕಾಶ ಕೋರಿದ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ನವದೆಹಲಿ, (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಗೃಹ ಸಚಿವ ಪಿ.ಚಿದಂಬರಂ ಅವರನ್ನು ಏಕೆ ಸಹ ಆಪಾದಿತರನ್ನಾಗಿ ಮಾಡಲಾಗುತ್ತಿದೆ ಎಂಬ ಬಗ್ಗೆ ಹೇಳಿಕೆ ನೀಡಲು ಅವಕಾಶ ನೀಡಬೇಕು ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯವನ್ನು ಕೋರಿದರು.

ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಅವರ ಎದುರು ಹಾಜರಾದ ಸ್ವಾಮಿ, ಚಿದಂಬರಂ ಅವರನ್ನೂ ಆಪಾದಿತರನ್ನಾಗಿ ಪರಿಗಣಿಸಿ ಅವರನ್ನು ವಿಚಾರಣೆಗೆ ಗುರಿಪಡಿಸಬೇಕು ಎಂದು ಕೋರಿ ತಾವು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.

ನ್ಯಾಯಾಲಯವು ಅಲ್ಪ ಕಾಲ ಕಲಾಪ ನಡೆಸಿ ಪ್ರಕರಣದ ವಿಚಾರಣೆಯನ್ನು ಈ ತಿಂಗಳ 24ಕ್ಕೆ ಮುಂದೂಡಿತು. ಕಳೆದ ಸೆ.15ರಂದು ಸ್ವಾಮಿ ನ್ಯಾಯಾಲಯದಲ್ಲಿ ಚಿದಂಬರಂ ಅವರ ವಿರುದ್ಧ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಕೋರಿದ್ದರು.
 
ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ ಮತ್ತು ಚಿದಂಬರಂ ಅವರು ಸೇರಿಕೊಂಡೇ 2ಜಿ ತರಂಗಾಂತರ ಪರವಾನಗಿ ಹಂಚಿಕೆ ನಿರ್ಧಾರ ತೆಗೆದುಕೊಂಡಿರುವ ವಿಚಾರವನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.