ADVERTISEMENT

ಹೈ.ಕ ಗೆ ವಿಶೇಷ ಸ್ಥಾನ ನೀಡಲು ಪ್ರಧಾನಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2011, 13:40 IST
Last Updated 21 ಮಾರ್ಚ್ 2011, 13:40 IST

ನವದೆಹಲಿ, (ಪಿಟಿಐ): ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸರ್ವ ಪಕ್ಷಗಳ ನಿಯೋಗ, ಸೋಮವಾರ ಇಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜ್ಯದ ಹಿಂದುಳಿದ ಪ್ರದೇಶವಾದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿತು.

ಹಿಂದುಳಿದಿರುವ ಗುಲ್ಬರ್ಗ, ಬೀದರ್, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡ ಹೈದರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಅನುಕೂಲವಾಗುವಂತೆ ಸಂವಿಧಾನದಕ್ಕೆ ತಿದ್ದುಪಡಿ ತಂದು ಆ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಒದಗಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ರೇಷ್ಮೆ ಮತ್ತು ಅಡಿಕೆ ಬೆಳಗಾರರ ತೊಂದರೆಗಳ ಬಗ್ಗೆಯೂ ಪ್ರಧಾನಿ ಮನಮೋಹನ್ ಸಿಂಗ್ ಅವರ ಗಮನ ಸೆಳೆದ  ನಿಯೋಗ, ಆ ಬೆಳೆಗಾರರ ಸಂಕಷ್ಟಗಳನ್ನು ನೀಗಿಸಲು ಸೂಕ್ತ ಕ್ರಮ ಜರುಗಿಸುವಂತೆಯೂ ಮನವಿ ಮಾಡಿಕೊಂಡಿತು.

ADVERTISEMENT

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಕಾನೂನು ಸಚಿವ ಎಂ. ವೀರಪ್ಪ ಮೊಯಿಲಿ ಮತ್ತು ಕಾರ್ಮಿಕ ಸಚಿವ ಮಲ್ಲಕಾರ್ಜುನ ಖರ್ಗೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

~ಸಂಬಂಧಿಸಿದ ಸಚಿವರೊಂದಿಗೆ ಈ ವಿಷಯಗಳ ಕುರಿತು ಚರ್ಚೆ ನಡೆಸಿ ತಾವು ಸೂಕ್ರ ಕ್ರಮ ಜರುಗಿಸುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭರವಸೆ ನೀಡಿದ್ದಾರೆ~ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿಯ ಭೇಟಿಯ ನಂತರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.