ADVERTISEMENT

‘ತಡೆಯಾಜ್ಞೆ ಕೃಷ್ಣ ಅವರಿಗಷ್ಟೇ ಅನ್ವಯ’

ಅಕ್ರಮ ಗಣಿಗಾರಿಕೆ: ಲೋಕಾಯುಕ್ತ ತನಿಖೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:30 IST
Last Updated 5 ಮಾರ್ಚ್ 2014, 19:30 IST

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಗೆ 2012ರಲ್ಲಿ ತಾನು ನೀಡಿರುವ ಮಧ್ಯಾಂತರ ತಡೆಯಾಜ್ಞೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರಿಗೆ ಮಾತ್ರ ಅನ್ವಯ ಆಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಸ್ಪಷ್ಟಪಡಿಸಿದೆ.

ಕೃಷ್ಣ ಸಲ್ಲಿಸಿರುವ ಕ್ರಿಮಿನಲ್‌ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯ­ಮೂರ್ತಿಗಳಾದ ಜ್ಞಾನಸುಧಾ ಮಿಶ್ರಾ ಮತ್ತು ವಿ. ಗೋಪಾಲ ಗೌಡ ಅವರಿದ್ದ ಪೀಠ ಮೌಖಿಕವಾಗಿ ಈ ಸ್ಪಷ್ಟನೆ ನೀಡಿದೆ.

ಕೃಷ್ಣ, ಧರ್ಮಸಿಂಗ್‌ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ತನಿಖೆಗೆ ಆದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ
ಮೂವರ ವಿರುದ್ಧ ತನಿಖೆಗೆ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಕೃಷ್ಣ  ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಅವರ ಅರ್ಜಿ ಅಲ್ಲಿ ಮಾನ್ಯವಾಗದ ಕಾರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕೃಷ್ಣ ವಿರುದ್ಧದ ತನಿಖೆಗೆ ಮಧ್ಯಾಂತರ ತಡೆಯಾಜ್ಞೆ ನೀಡಿ 2012ರ ಜನವರಿ 28ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.