ನವದೆಹಲಿ: 12ನೇ ತರಗತಿಯ ಪೂರಕ ಪರೀಕ್ಷೆ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಲು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ನಿರ್ದೇಶನ ನೀಡುವಂತೆ ಕೋರಿ 1,152 ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಪೂರಕ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲು ಮಂಡಳಿ ಮುಂದಾಗಿರುವುದು ಅದರ ಇಬ್ಬಗೆಯ ನೀತಿಯಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.
‘12ನೇ ತರಗತಿಯ ಸಾಮಾನ್ಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನವನ್ನೇ ನಮಗೂ ಅನುಸರಿಸಿ, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
‘ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಭೌತಿಕವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂಬ ಮಂಡಳಿಯ ನಿರ್ಧಾರವು, ಲಕ್ಷಾಂತರ ವಿದ್ಯಾರ್ಥಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಅದು, ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ‘ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ಸುಪ್ರೀಂ ಕೋರ್ಟ್ ಈ ಕುರಿತ ವಿಚಾರಣೆಯಲ್ಲಿ ಸೋಮವಾರ ಕೈಗೆತ್ತಿಕೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.