ಬಂಧನ ( ಸಾಂಕೇತಿಕ ಚಿತ್ರ)
ಮಹು/ಇಂದೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಂಭ್ರಮಿಸಿ ಮಧ್ಯಪ್ರದೇಶದ ಮಹು ಪಟ್ಟಣದಲ್ಲಿ ನಡೆಸಲಾಗುತ್ತಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘರ್ಷಣೆಗೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.
ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ .
ಇಂದೋರ್ ಜಿಲ್ಲೆಯ ಮಹು ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಐದು ಹಿಂಸಾಚಾರ ಘಟನೆಗಳು ನಡೆದಿದ್ದು, ಮೂರು ಕಾರುಗಳು ಮತ್ತು ಹಲವಾರು ದ್ವಿಚಕ್ರ ವಾಹನಗಳ ಮೇಲೆ ದಾಳಿ ಮಾಡಿ ಅವುಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಿಂಸಾಚಾರದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ . ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಈವರೆಗೆ 13 ಜನರನ್ನು ಪೊಲೀಸರು ಬಂಧಿಸಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಕೆಲವು ವಿಡಿಯೊಗಳು ಸಹ ದೊರಕಿವೆ ಎಂದು ಸಿಂಗ್ ತಿಳಿಸಿದ್ದಾರೆ.
ಘಟನೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳು ಅಥವಾ ಸಂದೇಶಗಳನ್ನು ಹರಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.