ADVERTISEMENT

ಛತ್ತೀಸ್‌ಗಡದಲ್ಲಿ 15 ನಕ್ಸಲರ ಹತ್ಯೆ

ಶೋಧ ಕಾರ್ಯ ಮುಂದುವರಿಕೆ

ಏಜೆನ್ಸೀಸ್
Published 6 ಆಗಸ್ಟ್ 2018, 15:28 IST
Last Updated 6 ಆಗಸ್ಟ್ 2018, 15:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಛತ್ತೀಸ್‌ಗಡದ ಸುಕ್ಮಾ ಬಳಿ 15ನಕ್ಸಲರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

ಸುಕ್ಮಾ ಸಮೀಪದ ಗೋಲಾಪಲ್ಲಿ ಮತ್ತು ಕೊಂತ ನಡುವಣ ಅರಣ್ಯ ಪ್ರದೇಶದಲ್ಲಿ ಭಾನುವಾರ ರಾತ್ರಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಜಿಲ್ಲಾ ಮೀಸಲು ಪಡೆ, ಕೇಂದ್ರ ಅರೆಸೇನಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ನಕ್ಸಲರಿಗೆ ಸೇರಿದ 16 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಪಡೆಗಳಿಂದ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೊಂದು ಮೂಲದ ಪ್ರಕಾರ, ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಣ ಗುಂಡಿನ ಚಕಮಕಿ ಮುಂದುವರಿದಿದೆ ಎನ್ನಲಾಗಿದೆ.

ಜುಲೈ 19ರಂದು ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಎಂಟು ಮಂದಿ ನಕ್ಸಲರು ಹತರಾಗಿದ್ದರು. ಬಿಜಾಪುರ ಮತ್ತು ದಂತೇವಾಡ ಜಿಲ್ಲೆಯ ಗಡಿಭಾಗದಲ್ಲಿರುವ ಟಿಮಿನಾರ್‌ ಮತ್ತು ಪುಸನಾರ್‌ ಗ್ರಾಮದ ಅರಣ್ಯದಲ್ಲಿ ಚಕಮಕಿ ನಡೆದಿತ್ತು. 12 ಬಂದೂಕುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ವರ್ಷದ ಆರಂಭದಲ್ಲಿ ಬಿಜಾಪುರ ಜಿಲ್ಲೆಯಲ್ಲಿ ಎರಡು ಎನ್‌ಕೌಂಟರ್‌ಗಳಲ್ಲಿ 18 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.