ಸಾಂದರ್ಭಿಕ ಚಿತ್ರ
ಪತ್ತನಂತಿಟ್ಟ(ಕೇರಳ): ಕಳೆದ ಐದು ವರ್ಷಗಳಿಂದ ದಲಿತ ಯುವತಿಯೊಬ್ಬರ ಮೇಲೆ 60ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ 14 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣ ಸಂಬಂಧ ಇನ್ನೂ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು. ಘಟನೆ ಬಗ್ಗೆ ವಿವರವಾದ ವರದಿಯನ್ನು ಮೂರು ದಿನಗಳ ಒಳಗಾಗಿ ನೀಡುವಂತೆ ಪೊಲೀಸರಿಗೆ ತಿಳಿಸಿದೆ.
ಈ ಘಟನೆ ಸಂಬಂಧ ಪತ್ತನಂತಿಟ್ಟ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ನಾನು ಕಳೆದ ಐದು ವರ್ಷಗಳಿಂದ ಅನೇಕ ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು 18 ವರ್ಷದ ಯುವತಿ ದೂರು ನೀಡಿದ್ದಾರೆ. ಆಕೆ ನೀಡಿರುವ ಹೇಳಿಕೆಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತೆ 13 ವರ್ಷ ವಯಸ್ಸಿನವಳಾಗಿದ್ದಾಗ ಆಕೆಯ ಕೋಚ್‌ಗಳು, ಸಹ ಕ್ರೀಡಾಪಟುಗಳು, ಸಹಪಾಠಿಗಳು ಸೇರಿದಂತೆ 60ಕ್ಕೂ ಹೆಚ್ಚು ಜನರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ 60ಕ್ಕೂ ಹೆಚ್ಚು ಜನರು ಭಾಗಿಯಾಗಿರುವ ಸಾಧ್ಯತೆ ಇದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.