ಪಿಟಿಐ
ಇಂದೋರ್: 1975ರ ‘ತುರ್ತು ಪರಿಸ್ಥಿತಿ’ಯು 50 ವರ್ಷಗಳ ಹಳೆಯದು. ಆದರೆ ಬಿಜೆಪಿ ಆಡಳಿತದಲ್ಲಿ 11 ವರ್ಷಗಳಿಂದ ‘ಅಘೋಷಿತ ತುರ್ತು ಪರಿಸ್ಥಿತಿ’ ಜಾರಿಯಲ್ಲಿದೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ದಿಗ್ವಿಜಯ್ ಸಿಂಗ್ ಶುಕ್ರವಾರ ಆರೋಪಿಸಿದರು.
1975ರ ತುರ್ತು ಪರಿಸ್ಥಿತಿಯ ವಿರುದ್ಧ ಬಿಜೆಪಿ ಆರಂಭಿಸಿರುವ ‘ಸಂವಿಧಾನ ಹತ್ಯಾ ದಿನ’ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ಸಿಂಗ್, ‘2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಲವರನ್ನು ಅಸಾಂವಿಧಾನಿಕವಾಗಿ ಬಂಧಿಸಲಾಗಿದೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ನಾಗರಿಕರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಈಗಿನ ಪರಿಸ್ಥಿತಿಯು ಹಿಂದೆಂದಿಗಿಂತ ಅಪಾಯಕಾರಿಯಾಗಿದೆ’ ಎಂದು ಹೇಳಿದರು.
1975–77ರವರೆಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ಕ್ಷಮೆಯಾಚಿಸಬೇಕು ಎಂಬ ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಆರ್‌ಎಸ್‌ಎಸ್ ಮುಖ್ಯಸ್ಥರಾಗಿದ್ದ ಬಾಳಾಸಾಹೇಬ್ ದೇವರಸ್ ಅವರು ತುರ್ತು ಪರಿಸ್ಥಿತಿಯನ್ನು ಬೆಂಬಲಿಸಿದ್ದರು ಎಂದು ಅವರು (ಹೊಸಬಾಳೆ) ಮರೆತಿರುವುದೇಕೆ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.