ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಮುಂಬೈ: ಹಣದ ವಿವಾದದ ಹಿನ್ನೆಲೆಯಲ್ಲಿ ಇಬ್ಬರು ಹದಿಹರೆಯದ ಹುಡುಗರನ್ನು ವಿವಸ್ತ್ರಗೊಳಿಸಿ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕೊರಿಯರ್ ವ್ಯವಹಾರದಲ್ಲಿರುವ ಆರೋಪಿಗಳು ಈ ಕೃತ್ಯವನ್ನು ಚಿತ್ರೀಕರಿಸಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಸಂತ್ರಸ್ತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಎರಡು ವಾರಗಳ ಹಿಂದೆ ನಡೆದಿದ್ದು, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಇತರ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಆರೋಪಿಗಳು ಸಂತ್ರಸ್ತರಿಗೆ ಸ್ಪಲ್ಪ ಹಣವನ್ನು ಸಾಲವಾಗಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಸಂತ್ರಸ್ತರನ್ನು ಅಪಹರಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಕೋಣೆಯಲ್ಲಿ ಕೂಡಿಹಾಕಿದ್ದರು. ಬಳಿಕ, ಅವರನ್ನು ವಿವಸ್ತ್ರಗೊಳಿಸಿ ಬಲವಂತವಾಗಿ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಲೋಕಮಾನ್ಯ ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಇತರ ಮೂವರು ವ್ಯಕ್ತಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. , ಅಪರಾಧಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.