
ಮಹಾಬಲಿಪುರಂ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ– ಟಿವಿಕೆ ನಡುವೆ ಹಣಾಹಣಿ ನಡೆಯಲಿದೆ ಎಂದು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಚಿತ್ರನಟ ವಿಜಯ್ ಬುಧವಾರ ಇಲ್ಲಿ ಹೇಳಿದರು.
ನಗರದ ಹೋಟೆಲ್‌ವೊಂದರಲ್ಲಿ ನಡೆದ ಪಕ್ಷದ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆಗೆ, ಟಿವಿಕೆ ಪ್ರಬಲ ಪರ್ಯಾಯ ಶಕ್ತಿಯಾಗಿದೆ ಎಂದರು.
ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತವನ್ನು ಪ್ರಸ್ತಾಪಿಸಿದ ವಿಜಯ್, ‘ವಿಚಾರಣೆಗಾಗಿ ಆತುರಾತುರವಾಗಿ ಏಕ ಸದಸ್ಯ ಆಯೋಗವನ್ನು ರಚಿಸಿರುವ ಸರ್ಕಾರದ ಕ್ರಮವನ್ನು ಜನರೇ ಪ್ರಶ್ನಿಸುತ್ತಿದ್ದಾರೆ’ ಎಂದು ಹೇಳಿದರು.
‘ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಸಹ ದುರಂತದ ಕುರಿತು ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದರು’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ವಾಗ್ದಾಳಿ ನಡೆಸಿದರು.
‘ಕಾಲ್ತುಳಿತದಲ್ಲಿ ಮೃತಪಟ್ಟ ಆತ್ಮೀಯರ ಸಾವಿನ ನೋವನ್ನು ಹೇಳಿಕೊಳ್ಳಲಾಗಲ್ಲ. ಆಡಳಿತಾರೂಢರು ತೀವ್ರ ತೊಂದರೆ ನೀಡುತ್ತಿದ್ದಾರೆ. ಆದರೆ ಈ ಎಲ್ಲ ಅಡೆತಡೆಗಳನ್ನು ದಾಟಿ 2026ರ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸಲಿದ್ದೇವೆ’ ಎಂದು ಪುನರುಚ್ಚರಿಸಿದರು.
ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಸಭೆ ಆರಂಭಕ್ಕೂ ಮುನ್ನವೇ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿಜಯ್ ಮುಖ್ಯಮಂತ್ರಿ ಅಭ್ಯರ್ಥಿ
ಟಿವಿಕೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯ್ ಅವರನ್ನೇ ‘ಮುಖ್ಯಮಂತ್ರಿ ಅಭ್ಯರ್ಥಿ’ ಎಂದು ಘೋಷಿಸಲಾಯಿತು. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಧಿಕಾರವನ್ನು ಅಧ್ಯಕ್ಷರಿಗೆ ನೀಡಲಾಯಿತು. ಸಭೆಯಲ್ಲಿ 12 ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.