ADVERTISEMENT

ಉತ್ತರಾಖಂಡ| ಕಣಿವೆಗೆ ಉರುಳಿದ ಬಸ್‌: 25 ಮಂದಿ ಸಾವು

ಪಿಟಿಐ
Published 6 ಜೂನ್ 2022, 1:01 IST
Last Updated 6 ಜೂನ್ 2022, 1:01 IST
ಬಸ್‌ ದುರಂತದ ಚಿತ್ರ
ಬಸ್‌ ದುರಂತದ ಚಿತ್ರ    

ಉತ್ತರಕಾಶಿ, ಉತ್ತರಾಖಂಡ: ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ಸಂಜೆ ಇಲ್ಲಿಗೆ ಸಮೀಪದ ದಮ್ಟಾ ಎಂಬಲ್ಲಿ ಕಣಿವೆಗೆ ಉರುಳಿಬಿದ್ದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಾತ್ರಿಕರೆಲ್ಲರೂ ಮಧ್ಯಪ್ರದೇಶದ ಪನ್ನಾ ಜಿಲ್ಲೆಯವರು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಧಾ ರತೂರಿ ತಿಳಿಸಿದ್ದಾರೆ.

‘ರಾಷ್ಟ್ರೀಯ ಹೆದ್ದಾರಿ– 94ರಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ 28 ಮಂದಿ ಪ್ರಯಾಣಿಕರಿದ್ದರು. ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಹದಿನೇಳು ಮೃತದೇಹಗಳನ್ನು ಕಣಿವೆಯಿಂದ ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ದಮ್ಟಾದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ’ ಎಂದು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ತಿಳಿಸಿದ್ದಾರೆ.

ADVERTISEMENT

‘ಘಟನಾ ಸ್ಥಳಕ್ಕೆ ಉತ್ತರಕಾಶಿ ಜಿಲ್ಲಾಧಿಕಾರಿ ಅಭಿಷೇಕ್‌ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ದೊರೆತ ತಕ್ಷಣ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸಚಿವಾಲಯದ ವಿಪತ್ತು ನಿಯಂತ್ರಣ ಕೊಠಡಿಗೆ ತೆರಳಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಉತ್ತರಕಾಶಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚಿಸಿದರು.

‘ಅಪಘಾತದ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಧಾಮಿ ಟ್ವೀಟ್ ಮಾಡಿದ್ದಾರೆ.

ಪರಿಹಾರ: ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಘಟನೆ ಕುರಿತು ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.