
ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಧ್ವಜಾರೋಹಣ ನೇರವೇರಿಸಿದರು.
ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ದೊರೆತ ರಕ್ಷಾ ಕವಚ. ಅದೊಂದು ಸಾಮಾಜಿಕ ಕ್ರಾಂತಿಯ ಗ್ರಂಥ. ಅದನ್ನು ಓದಿದರೆ ಸಾಲದು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಚಿವ ಲಾಡ್ ಹೇಳಿದರು.
ಯುವಜನರು ಕೌಶಲಗಳನ್ನು ಕಲಿಯಬೇಕು. ವೃತ್ತಿಯಲ್ಲಿ ಸಾಧನೆ ಮೆರೆಯಬೇಕು. ದುಶ್ಚಟಗಳ ಗೀಳು ಬೆಳೆಸಿಕೊಳ್ಳಬಾರದು. ಮಾದಕ ಪದಾರ್ಥ, ಮದ್ಯಪಾನ, ಧೂಮಪಾನದಿಂದ ದೂರ ಇರಬೇಕು ಎಂದರು.
ಜಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಉಪಸ್ಥಿತರಿದ್ದರು.
ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ 5,000 ಸರ್ಕಾರಿ ಶಾಲೆಗಳಲ್ಲಿ ₹160 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ವಿಜ್ಞಾನ ಪ್ರಯೋಗಾಲಯ ಅಳವಡಿಸಲಾಗುತ್ತಿದೆ ಎಂದರು.
ಹೊಸ ಕೊಠಡಿಗಳು, ಶೌಚಾಲಯ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ₹500 ಕೋಟಿ ವ್ಯಯಿಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥೇವರ್ ಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು.
ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆಯ ಸಾಲು ಓದಿ ನಿರ್ಗಮಿಸಿದ್ದರು. ಇದರಿಂದ ವಿವಾದ ಸೃಷ್ಟಿಯಾಗಿತ್ತು.
ರಾಜ್ಯಪಾಲರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು (ಸೋಮವಾರ) ನಡೆದ ಕಾರ್ಯಕ್ರಮದಲ್ಲಿ 24 ಪುಟಗಳ ಭಾಷಣ ಓದಿದರು. ಹಿಂದಿಯಲ್ಲಿ ಅವರು ಭಾಷಣ ಮಾಡಿದರು.
ನಮ್ಮ ಸರ್ಕಾರದ ಕಾರ್ಯಕ್ರಮ ಎಂದು ಭಾಷಣದಲ್ಲಿರುವ ಅಂಶಗಳನ್ನು ಉಲ್ಲೇಖಿಸಿದರು. 20 ನಿಮಿಷದಲ್ಲಿ ತಮ್ಮ ಭಾಷಣ ಮುಗಿಸಿದರು.
ಚಿಕ್ಕಬಳ್ಳಾಪುರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಣ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪೊಲೀಸ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ ದಲ್ಲಿ ಶೀಘ್ರದಲ್ಲಿ ಹೂ ಮಾರುಕಟ್ಟೆಗೆ ಟೆಂಡರ್ ಆಗಲಿದೆ. ಜಿಲ್ಲೆಯ ವೈದ್ಯಕೀಯ ಕಾಲೇಜಿನ ಕಾಮಗಾರಿಗೆ ನಮ್ಮ ಸರ್ಕಾರ ₹ 375 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.
ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ಗಣರಾಜೋತ್ಸವ ಸಂದೇಶ ನೀಡಿದ ಸಚಿವ ಎಂ.ಬಿ.ಪಾಟೀಲ,'ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವವು ತನ್ನ ನಾಗರಿಕರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾಯತ್ತತೆಯನ್ನು ನೀಡುತ್ತದೆ. ಜನರನ್ನು ಆಡಳಿತದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುತ್ತದೆ. ಸರ್ಕಾರದ ಜವಾಬ್ದಾರಿ ಹೆಚ್ಚಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುತ್ತದೆ. ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಭಿನ್ನಾಭಿಪ್ರಾಯಗಳನ್ನು ಹಿಂಸೆಯಿಲ್ಲದೆ ಬಗೆಹರಿಸಲು ವೇದಿಕೆ ನೀಡುತ್ತದೆ ಎಂದು ಬಣ್ಣಿಸಿದರು.
ಮಂಚೇನಹಳ್ಳಿಯಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ.
ಸರ್ಕಾರಿ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯದಲ್ಲಿ ತಹಶೀಲ್ದಾರ್ ಪೂರ್ಣಿಮಾ ಧ್ವಜಾರೋಹಣ ನೆರವೇರಿಸಿದರು.
ದ್ವೀಪಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಸೇಂಟ್ ಮೇರೀಸ್ ದ್ವೀಪದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸೇಂಟ್ ಮೇರೀಸ್ ಸೇರಿದಂತೆ ರಾಜ್ಯದಲ್ಲಿರುವ 116 ದ್ವೀಪಗಳೂ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಅಪಾರ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಇಂತಹ ದ್ವೀಪಗಳನ್ನು ಬಳಸಿಕೊಳ್ಳಲು ವಿಫಲರಾಗಿದ್ದೇವೆ ಎಂದರು.
ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ತೆರದ ಜೀಪಿನಲ್ಲಿ ಮೈದಾನದಲ್ಲಿ ಸಾಗಿದ ಸಚಿವರು, ಕವಾಯತು ಪರಿವೀಕ್ಷಣೆ ಮಾಡಿದರು. ಸ್ವಸ್ಥಾನಕ್ಕೆ ಮರಳಿದ ತಕ್ಷಣ ಗಣರಾಜ್ಯೋತ್ಸವ ಪರೇಡ್ ಆರಂಭವಾಯಿತು.
ಕವಾಯತಿನಲ್ಲಿ 22 ತಂಡಗಳು ಪಾಲ್ಗೊಂಡಿದ್ದವು. ಇದರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಅರಣ್ಯ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಸೇರಿದಂತೆ 5 ಇಲಾಖಾ ತಂಡಗಳು. ಎನ್‌ಸಿಸಿ, ಶಾಲಾ ಹಾಗೂ ಕಾಲೇಜು ತಂಡಗಳಲ್ಲಿ ನೂರಾರು ವಿದ್ಯಾರ್ಥಿಗಳು ಹೆಜ್ಜೆ ಹಾಕಿ ಗಮನ ಸೆಳೆದರು.
ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ನಂತರ ಪೊಲೀಸ್, ಅರಣ್ಯ ದಳ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಸ್ಕೌಟ್ ಅಂಡ್ ಗೈಡ್ಸ್ ಸೇರಿದಂತೆ ಒಟ್ಟು 16 ಪಡೆಗಳಿಂದ ಸಚಿವರು ಗೌರವ ವಂದನೆ ಸ್ವೀಕರಿಸಿದರು.
ರಾಯಚೂರು: ಜಿಲ್ಲಾಡಳಿತದ ವತಿಯಿಂದ ಇಲ್ಲಿಯ 77ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು.
‘ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ. ‘ಸಂವಿಧಾನ ತೋರಿದ ಮಾರ್ಗದಲ್ಲಿ ಸಾಗಿದ ಕಾರಣ ದೇಶ ಸಾಕಷ್ಟು ಪ್ರಗತಿ ಸಾಧಿಸಿದೆ. ಸಂವಿಧಾನದ ಬೆಳಕಿನಲ್ಲೇ ದೇಶವು ಮುನ್ನೆಡೆಯುತ್ತಿದೆ‘ ಎಂದು ಬಣ್ಣಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಆನಂತರ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ದೇಶದ ಜನರಿಗೆ ಶುಭಾಶಯ ಕೋರಿರುವ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೂಲ ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ಹೇಳಿದ್ದಾರೆ. ಹಾಗೆಯೇ, ಗಣರಾಜ್ಯವನ್ನು ರಕ್ಷಿಸಿಕೊಳ್ಳಲು 'ಸಾಮೂಹಿಕ ಎಚ್ಚರಿಕೆ' ಅಗತ್ಯ ಎಂದು ಒತ್ತಿ ಹೇಳಿದ್ದಾರೆ.
ವೈವಿಧ್ಯತೆಯಿಂದ ಕೂಡಿರುವ ಸಮಾಜದಲ್ಲಿ ಸಾಮರಸ್ಯಕ್ಕೆ ಕರೆ ನೀಡಿರವ ಮಮತಾ, ದೇಶವು ಬಹುತ್ವ, ವಿವಿಧತೆ, ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಸಾಮರಸ್ಯ ಸಾಧಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ರಚಿಸಿದವರು, ಯೋಧರು, ಸಾಮಾನ್ಯ ನಾಗರಿಕರಿಗೂ ವಂದನೆ ಸಮರ್ಪಿಸಿದ್ದಾರೆ.
ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭಗೊಂಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶುಭಾಶಯಗಳನ್ನು ಕೋರಿ ಪರೇಡ್‌ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್, ರಕ್ಷಣೆ, ವಿದ್ಯಾರ್ಥಿಗಳು. ಭಾರತ್ ಸ್ಕೌಟ್ಸ್, ಎನ್‌ಸಿಸಿ, ಎನ್‌ಎಸ್ಎಸ್, ರೆಡ್ ಕ್ರಾಸ್ ಸಹಿತ 30 ಕ್ಕೂ ತುಕಡಿಗಳಿಂದ ಗೌರವವನ್ನು ಪಡೆದರು.
ಒಟ್ಟು 1326 ಮಂದಿ ಪರೇಡ್ ನಲ್ಲಿ ಹೆಜ್ಜೆ ಹಾಕಿದರು.
ಮಡಿಕೇರಿಯ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.
ಇದಕ್ಕೂ ಮುನ್ನ ಅವರು ರಾಷ್ಟ್ರ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.
ನಂತರ ತೆರೆದ ಜೀಪಿನಲ್ಲಿ ತೆರಳಿ, ಪರೇಡ್ ಪರಿವೀಕ್ಷಣೆ ಮಾಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಇತರರಿದ್ದರು.
ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಭಾರತಕ್ಕೆ ಶುಭಾಶಯ ಕೋರಿದ್ದಾರೆ. ರಕ್ಷಣೆ ಹಾಗೂ ಇತರ ರಂಗಗಳಲ್ಲಿ ಭಾರತ ಮತ್ತು ಕ್ವಾಡ್ ರಾಷ್ಟ್ರಗಳ ನಡುವಣ ಸಹಕಾರವನ್ನು ಶ್ಲಾಘಿಸಿದ್ದಾರೆ.
ಅಮೆರಿಕ – ಭಾರತ ಸಂಬಂಧವು, ರಕ್ಷಣೆ, ಇಂಧನ, ನಿರ್ಣಾಯಕ ಖನಿಜಗಳ ಸಂಪನ್ಮೂಲ ವಿಚಾರಗಳಲ್ಲಿ ಉಭಯ ದೇಶಗಳ ನಡುವಣ ಸಹಕಾರ ಮತ್ತು ಕ್ವಾಡ್ ಒಕ್ಕೂಟದ ಮೂಲಕ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ನೈಜ ಫಲಿತಾಂಶಗಳನ್ನು ನೀಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. 'ಗಣರಾಜ್ಯೋತ್ಸವದ ಈ ಸಂದರ್ಭವು, ವಿಕಸಿತ ಭಾರತ ನಿರ್ಮಾಣ ಮಾಡುವ ನಮ್ಮೆಲ್ಲರ ಸಾಮೂಹಿಕ ಸಂಕಲ್ಪಕ್ಕೆ ಹೊಸ ಶಕ್ತಿ ಮತ್ತು ಹುರುಪು ತುಂಬಲಿ' ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.