ಪ್ರಾತಿನಿಧಿಕ ಚಿತ್ರ
ಕೋಲ್ಕತ್ತ: ಕೋಲ್ಕತ್ತದ ಮನೆಯೊಂದರಲ್ಲಿ ಇಬ್ಬರು ಮಹಿಳೆಯರು ಹಾಗೂ ಬಾಲಕಿಯ ಮೃತದೇಹ ಪತ್ತೆಯಾಗಿವೆ. ಅದೇ ಕುಟುಂಬದ ಇತರೆ ಮೂವರು ಸದಸ್ಯರು ಅಘಫಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಇಲ್ಲಿನ ತಂಗ್ರಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕಿಯ ಶವ ಪತ್ತೆಯಾಗಿದೆ. ಅದೇ ಕುಟುಂಬದ ಮೂವರು ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮೆಟ್ರೊ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ವರದಿ ಪ್ರಕಾರ, ಬಾಲಕಿ ಹಾಗೂ ಇಬ್ಬರು ಮಹಿಳೆಯರು ವಿಷ ಬೆರೆಸಿದ ಆಹಾರ ಪದಾರ್ಥವನ್ನು ಸೇವಿಸಿ ಮೃತಪಟ್ಟಿರಬಹುದು. ಈ ಮೂವರ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ನಂತರ ಬಹಿರಂಗಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
'ನಮ್ಮ ಕುಟುಂಬ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು, ಹೀಗಾಗಿ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು ಎಂದು ಅಪಘಾತದಲ್ಲಿ ಗಾಯಗೊಂಡಿರುವ ಕುಟುಂಬ ಸದಸ್ಯನೊಬ್ಬ ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮೂವರನ್ನು ಚೇತರಿಸಿಕೊಂಡ ಬಳಿಕ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.