ADVERTISEMENT

ಅಸ್ಸಾಂ | ಟ್ರಕ್ ಚಾಲಕರಿಂದ ಹಣಕ್ಕೆ ಬೇಡಿಕೆ: ನಾಲ್ವರು ಪೊಲೀಸರ ಬಂಧನ

ಪಿಟಿಐ
Published 6 ಜನವರಿ 2024, 12:54 IST
Last Updated 6 ಜನವರಿ 2024, 12:54 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಗುವಾಹಟಿ: ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಟ್ರಕ್‌ ಚಾಲಕರಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬಿಲಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಕಾ ತಪಾಸಣೆಯಲ್ಲಿ ತೊಡಗಿದ್ದ ನಾಲ್ವರು ಕಾನ್‌ಸ್ಟೆಬಲ್‌ಗಳು ಟ್ರಕ್ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದರು. ಮಿಜೋರಾಂನ ಅಂತರರಾಜ್ಯ ಗಡಿಯ ಸಮೀಪದ ಸ್ಥಳದಿಂದ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಅಕ್ರಮವಾಗಿ ಅಡಿಕೆ ಸಾಗಿಸುವ ಸರಕು ಸಾಗಣೆ ವಾಹನಗಳಿಗೆ ಯಾವುದೇ ದಾಖಲೆಗಳಿಲ್ಲದೆ ಸಾಗಾಟಕ್ಕೆ ಅನುವು ಮಾಡಿಕೊಡುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಅದರಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ನಾಕಾ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅವರನ್ನು ಬಂಧಿಸಿದ್ದಾರೆ.

ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅದೇ ದಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.