ADVERTISEMENT

5 ರಾಜ್ಯಗಳಲ್ಲಿ ಜೆಡಿಯು ಏಕಾಂಗಿ ಸ್ಪರ್ಧೆ: ಶರದ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2012, 19:30 IST
Last Updated 9 ಜನವರಿ 2012, 19:30 IST

ಬೆಂಗಳೂರು: ಸಂಯುಕ್ತ ಜನತಾದಳದ (ಜೆಡಿಯು) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಆಯೋಜಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಸಂಚಾಲಕ ಶರದ್ ಯಾದವ್ ತಿಳಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಪಕ್ಷ ನಿರ್ಧರಿಸಿದೆ. ಆದರೆ ಈ ನಿರ್ಧಾರದಿಂದ ರಾಷ್ಟ್ರಮಟ್ಟದಲ್ಲಿ ಎನ್‌ಡಿಎ ಏಕತೆಗೆ ಯಾವುದೇ ಧಕ್ಕೆಯಾಗದು~ ಎಂದರು.

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಬಾಬು ಸಿಂಗ್ ಕುಶಾವ ಅವರನ್ನು ಸೇರಿಸಿಕೊಂಡಿರುವುದೂ ಸೇರಿದಂತೆ ಬಿಜೆಪಿಯ ಕೆಲವು ನಡೆಗಳು ಜೆಡಿಯುಗೆ ಸರಿಕಾಣಲಿಲ್ಲ. ಈ ಹಿನ್ನೆಲೆಯಲ್ಲಿ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ 403, ಉತ್ತರಾಂಚಲದಲ್ಲಿ 20, ಮಣಿಪುರದಲ್ಲಿ 8 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ. ಪಂಜಾಬ್‌ನಲ್ಲಿ ಶಿರೋಮಣಿ ಅಕಾಲಿದಳಕ್ಕೆ ಬೆಂಬಲ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಬಳ್ಳಾರಿಯಲ್ಲಿ ಪ್ರಾಕೃತಿಕ ಸಂಪನ್ಮೂಲಗಳ ಲೂಟಿ ನಡೆದಂತೆ, ದೇಶದಾದ್ಯಂತ ಅನೇಕ ಪ್ರದೇಶಗಳಲ್ಲಿ ಸಂಪನ್ಮೂಲಗಳ ಅವ್ಯಾಹತ ಲೂಟಿ ನಡೆದಿದೆ. ಉತ್ತರ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಧಣಿಗಳು ಮತ್ತು ಬಿಲ್ಡರ್‌ಗಳು ಸೇರಿಕೊಂಡು ನವದೆಹಲಿಯ ಗಡಿ ಭಾಗದ ಫಲವತ್ತಾದ ಭೂಮಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷೇತರ ಶಾಸಕ ಬಿ. ಶ್ರೀರಾಮುಲು ಅವರು ಜೆಡಿಯು ಸೇರುತ್ತಾರಾ ಎಂದು ಪ್ರಶ್ನಿಸಿದಾಗ, `ಈ ಬಗ್ಗೆ ನಾನು ಏನನ್ನೂ ಹೇಳಲಾರೆ~ ಎಂದು ಉತ್ತರಿಸಿದರು. ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ. ನಾಡಗೌಡ, ಮಾಜಿ ಸಚಿವ ಬಿ. ಸೋಮಶೇಖರ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.