ADVERTISEMENT

ಪೀಠದಿಂದ ಪೀಠಕ್ಕೆ ವರ್ಗವಾಗಿದ್ದ ನ್ಯಾಯಮೂರ್ತಿಗಳ ನೇಮಕ ಕಾಯ್ದೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST

ನವದೆಹಲಿ: ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆಯನ್ನು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌, ನ್ಯಾಯಮೂರ್ತಿಗಳ ನೇಮಕಕ್ಕೆ ನಿಯಮಗಳನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ  2015ರ ಡಿಸೆಂಬರ್ 6ರಂದು ಸೂಚಿಸಿತ್ತು.

ಕೇಂದ್ರ ಸರ್ಕಾರ ನಿಯಮಗಳನ್ನು ರೂಪಿಸದಿದ್ದರೂ ನ್ಯಾಯಮೂರ್ತಿಗಳ ನೇಮಕ ಆಗಿರುವುದನ್ನು ಪ್ರಶ್ನಿಸಿ ಲೂಥ್ರಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಲೂಥ್ರಾ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

2017ರ ಅಕ್ಟೋಬರ್ 28ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಆದರ್ಶ ಕುಮಾರ್‌ ಗೋಯಲ್‌ ಮತ್ತು ಯು.ಯು.ಲಲಿತ್‌ ಅವರಿದ್ದ ದ್ವಿಸದಸ್ಯ ಪೀಠವು ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು. ‘ನಿಯಮಗಳನ್ನು ಅಂತಿಮಗೊಳಿಸುವಲ್ಲಿ ಇನ್ನಷ್ಟು ವಿಳಂಬ ಆಗಬಾರದು ಎಂಬ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿಯಿಂದ ನಾವು ಗಣನೆಗೆ ತೆಗೆದುಕೊಳ್ಳಲೇಬೇಕು. ಒಂದು ವರ್ಷ ಹತ್ತು ತಿಂಗಳು ಈಗಾಗಲೇ ಕಳೆದು ಹೋಗಿದೆ’ ಎಂದು ಪೀಠ ಕಳವಳ ವ್ಯಕ್ತಪಡಿಸಿತ್ತು.

ADVERTISEMENT

‘ಸುಪ್ರೀಂ ಕೋರ್ಟ್‌ ಸೂಚನೆ ನೀಡಿ ಇಷ್ಟು ದಿನ ಕಳೆದರೂ ನಿಯಮಗಳನ್ನು ಏಕೆ ಅಂತಿಮಗೊಳಿಸಿಲ್ಲ’ ಎಂದು ಪ್ರಶ್ನಿಸಿ ಕೇಂದ್ರ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿತ್ತು. ಈ ಅರ್ಜಿಯ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ನೆರವಾಗಲು ನ್ಯಾಯಾಲಯ ಸಹಾಯಕರಾಗಿ (ಆಮಿಕಸ್ ಕ್ಯೂರಿ) ಹಿರಿಯ ವಕೀಲ ಕೆ.ವಿ.ವಿಶ್ವನಾಥನ್ ಅವರನ್ನು ನೇಮಕ ಮಾಡಿಕೊಂಡಿತ್ತು. ಅರ್ಜಿಯ ಮುಂದಿನ ವಿಚಾರಣೆಯನ್ನು ನವೆಂಬರ್ 14ಕ್ಕೆ ನಿಗದಿ ಮಾಡಿತ್ತು.

ಆದರೆ ಎರಡನೇ ವಿಚಾರಣೆಗೂ ಮುನ್ನವೇ ಅರ್ಜಿಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸಲಾಗಿತ್ತು. ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್ ಮತ್ತು ಎ.ಕೆ.ಸಿಕ್ರಿ ಅವರಿದ್ದ ತ್ರಿಸದಸ್ಯ ಪೀಠವು, ದ್ವಿಸದಸ್ಯ ಪೀಠದಆದೇಶ ರದ್ದುಪಡಿಸಿತ್ತು. ‘ನ್ಯಾಯಾಲಯದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇಂತಹ ವಿಚಾರವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.