ADVERTISEMENT

‘ಅಕ್ರಮ– ಸಕ್ರಮ’ ತಡೆ ತೆರವಿಗೆ ಸುಪ್ರೀಂ ಕೋರ್ಟ್‌ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 19:30 IST
Last Updated 29 ಜನವರಿ 2018, 19:30 IST

ನವದೆಹಲಿ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಕಟ್ಟಡಗಳು ಮತ್ತು ರೂಪಿಸಲಾದ ಬಡಾವಣೆಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವದ ‘ಅಕ್ರಮ– ಸಕ್ರಮ’ ಯೋಜನೆಗೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಯೋಜನೆಗೆ ತಡೆ ನೀಡಿ 2017ರ ಜನವರಿ 13ರಂದು ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕಳೆದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು, ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿದ್ದ ಮೇಲ್ಮನವಿಯ ಅಂತಿಮ ವಿಚಾರಣೆ ಮುಂದಿನ ಮಾರ್ಚ್‌ 21ರಂದು ನಡೆಯಲಿದೆ. ಹಾಗಾಗಿ ತಡೆಯಾಜ್ಞೆ ಆದೇಶವನ್ನು ಮಾರ್ಪಾಡು ಮಾಡಲಾಗದು ಎಂದು ಸ್ಪಷ್ಟಪಡಿಸಿತು.

‘ಅಕ್ರಮ– ಸಕ್ರಮ’ ಯೋಜನೆ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು 2016ರ ಡಿಸೆಂಬರ್‌ 13ರಂದು ತಿರಸ್ಕರಿಸಿ ರಾಜ್ಯ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸರ್ಕಾರದ
ಪ್ರಸ್ತಾವಿತ ಯೋಜನೆಗೆ 2007ರಲ್ಲಿ ತಾನೇ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿ ಆದೇಶ ನೀಡಿತ್ತು.

ADVERTISEMENT

ಯೋಜನೆಯಿಂದ ₹1,400 ಕೋಟಿ ಆದಾಯ ಸಂಗ್ರಹಿಸುವ ನಿರೀಕ್ಷೆಯಲ್ಲಿದ್ದ ಸ್ಥಳೀಯ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್‌ ಆದೇಶದಿಂದ ಹಿನ್ನಡೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.