ಪ್ರಾತಿನಿಧಿಕ ಚಿತ್ರ
ಮುಂಬೈ: ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಪೊವೈ ಪ್ರದೇಶದಲ್ಲಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಲ್ಲು ತೂರಾಟ ನಡೆಸಿದ್ದ ಆರೋಪದಡಿ 200 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 57 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೃಹತ್ ಮಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕಾರಿಗಳು ಜೈ ಭೀಮ್ ನಗರ ಕೊಳಗೇರಿಯಲ್ಲಿ ಗುರುವಾರ ತೆರವು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅಲ್ಲಿನ ಜನರು ಕಲ್ಲು ತೂರಾಟ ನಡೆಸಿದ್ದರಿಂದ ಕನಿಷ್ಠ 15 ಪೊಲೀಸರು ಹಾಗೂ ಪಾಲಿಕೆಯ ಎಂಜಿನಿಯರ್‌ಗಳು, ಕಾರ್ಮಿಕರು ಸೇರಿದಂತೆ 10 ಮಂದಿ ಗಾಯಗೊಂಡಿದ್ದರು.
'ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಗಲಭೆ ನಡೆಸಿದ ಆರೋಪದಲ್ಲಿ 200ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 57 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ' ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊವೈ ಮತ್ತು ಮೌಜೆ ತಿರಂದಾಜ್ ಗ್ರಾಮಗಳಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಿಸಲಾಗಿದೆ. ಅವುಗಳನ್ನು ತೆರವು ಮಾಡಬೇಕು ಎಂದು ರಾಜ್ಯ ಮಾನವ ಹಕ್ಕು ಆಯೋಗವು ಪಾಲಿಗೆ ಸೂಚಿಸಿದೆ ಎಂದು ಬಿಎಂಸಿ ಈ ಮೊದಲೇ ಪ್ರಕಟಿಸಿತ್ತು.
ಅದರಂತೆ ತೆರವು ಕಾರ್ಯಾಚರಣೆ ಸಲುವಾಗಿ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಸ್ಥಳಕ್ಕೆ ಹೋಗಿದ್ದರು. ಕಾರ್ಯಾಚರಣೆಗೆ ಅಡ್ಡಿಪಡಿಸಿದ ಅಲ್ಲಿನ ನಿವಾಸಿಗಳು, ತಾವು 25 ವರ್ಷಗಳಿಂದ ಇದೇ ಜಾಗದಲ್ಲಿ ವಾಸಿಸುತ್ತಿರುವುದಾಗಿ ಹೇಳಿ ಪ್ರತಿಭಟನೆ ಆರಂಭಿಸಿದ್ದರು.
ಪುರುಷರು, ಮಹಿಳೆಯರೆಲ್ಲ ಕಲ್ಲು ತೂರಾಟದ ನಡೆಸಿದ್ದರು. ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣೆಗಾಗಿ ಓಡುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.