ADVERTISEMENT

ಹಾಥರಸ್‌ನಲ್ಲಿ ಮತ್ತೊಂದು ದುರ್ಘಟನೆ: ಅತ್ಯಾಚಾರಕ್ಕೊಳಗಾಗಿ 6 ವರ್ಷದ ಬಾಲಕಿ ಸಾವು

ಏಜೆನ್ಸೀಸ್
Published 6 ಅಕ್ಟೋಬರ್ 2020, 16:10 IST
Last Updated 6 ಅಕ್ಟೋಬರ್ 2020, 16:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಆಲಿಗಡ: ಹಾಥರಸ್‌ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ಜಿಲ್ಲೆಯಲ್ಲಿನ ಆರು ವರ್ಷದ ಬಾಲಕಿ ತನ್ನ ಸಂಬಂಧಿಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ. ಚಿಕಿತ್ಸೆ ವೇಳೆ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಹಾಥರಸ್‌ನ ಸದಾಬಾದ್ ಪ್ರದೇಶದ ಜಟೋಯಿ ಗ್ರಾಮದ ನಿವಾಸಿಯಾಗಿದ್ದ ಅಪ್ರಾಪ್ತೆಯು ಆಲಿಗಡ ಜಿಲ್ಲೆಯ ಇಗ್ಲಾಸ್ ಪ್ರದೇಶದ ಸಂಬಂಧಿಕರ ಮನೆಯಲ್ಲಿದ್ದಾಗ ಅತ್ಯಾಚಾರಕ್ಕೊಳಗಾಗಿದ್ದಳು. ಬಳಿಕ ಸೆಪ್ಟೆಂಬರ್‌ 17ರಂದು ಆಕೆಯನ್ನು ರಕ್ಷಿಸಲಾಗಿತ್ತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಜಿ ಜಿ ತಿಳಿಸಿದ್ದಾರೆ.

ಸಾಮಾಜಿಕ ಸಂಘಟನೆಯೊಂದು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಸಂತ್ರಸ್ತೆಯ ಸಂಬಂಧಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ ಬಾಲಕಿಯನ್ನು ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಎಸ್‌ಎಸ್‌ಪಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.

ADVERTISEMENT

ಬಾಲಕಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದಾಗಿ ಆಕೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಳಿಕ ಸೋಮವಾರ ಆಕೆ ಕೊನೆಯುಸಿರೆಳೆದಿದ್ದಾಳೆ. ವೈದ್ಯಕೀಯ ತಪಾಸಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಬಾಲಕಿಯನ್ನು ಸೆರೆಯಲ್ಲಿಟ್ಟು ಅತ್ಯಾಚಾರ ಎಸಗಲಾಗಿದೆ ಎಂದು ಶಂಕಿಸಿ ಹಾಥರಸ್ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಬಾಲಕಿಯ ತಂದೆಯ ದೂರಿನ ಮೇರೆಗೆ ಸೆಪ್ಟೆಂಬರ್ 21ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

'ಬಾಲಕನ ತಾಯಿ ಕೂಡ ಅಪರಾಧದಲ್ಲಿ ಭಾಗಿಯಾಗಿರುವುದಾಗಿ ವರದಿಯಾಗಿದ್ದು, ಆಕೆ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆರೋಪಿ ಮಹಿಳೆಯನ್ನು ಬಂದಿಸುವಲ್ಲಿ ಪೊಲೀಸರು ವಿಫಲರಾಗಿರುವುದನ್ನು ಖಂಡಿಸಿ ಸಂತ್ರಸ್ತೆಯ ಕುಟುಂಬವು ಹಾಥರಸ್‌ನ ಮುಖ್ಯ ರಸ್ತೆಯಲ್ಲಿ ಮೃತದೇಹವನ್ನಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಹಿರಿಯ ಅಧಿಕಾರಿಗಳು ಮನವೊಲಿಸಿದ ನಂತರವಷ್ಟೇ ಅಂತಿಮ ವಿಧಿ ವಿಧಾನಗಳನ್ನು ನಡೆಸಲು ಒಪ್ಪಿದ್ದಾರೆ.

ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಇಗ್ಲಾಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನ್ನು ಅಮಾನತುಗೊಳಿಸಲಾಗಿದೆ. ಮಹಿಳೆಯನ್ನು ಪತ್ತೆಹಚ್ಚಲು ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.