ADVERTISEMENT

7.5ರಷ್ಟು ಮೀಸಲಾತಿ ಕೋಟಾ: ವಿದ್ಯಾರ್ಥಿಗಳ ಶುಲ್ಕ ಭರಿಸಲಿರುವ ತಮಿಳುನಾಡು ಸರ್ಕಾರ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 19:57 IST
Last Updated 20 ಸೆಪ್ಟೆಂಬರ್ 2021, 19:57 IST
ಎಂ.ಕೆ. ಸ್ಟಾಲಿನ್‌
ಎಂ.ಕೆ. ಸ್ಟಾಲಿನ್‌   

ಚೆನ್ನೈ: ತಮಿಳುನಾಡು ಸರ್ಕಾರವು ವೃತ್ತಿಪರ ಕೋರ್ಸ್‌ಗಳಿಗೆ ಶೇ 7.5 ಮೀಸಲಾತಿ ಕೋಟಾದ ಮೂಲಕ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಬೋಧನಾ ಶುಲ್ಕ ಮತ್ತು ಇತರ ಶುಲ್ಕಗಳನ್ನು ಭರಿಸಲಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ಹೇಳಿದ್ದಾರೆ.

‘ಶೇ 7.5 ಕೋಟಾದ ಮೂಲಕ ವೃತ್ತಿಪರ ಕಾಲೇಜುಗಳಿಗೆ ಪ್ರವೇಶ ಪಡೆಯುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಮತ್ತು ಕೌನ್ಸೆಲಿಂಗ್ ಶುಲ್ಕ ಭರಿಸಲು ಸರ್ಕಾರ ಮುಂದಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದರು.

ತಮಿಳುನಾಡು ಸರ್ಕಾರವು ಕಳೆದ ತಿಂಗಳು, ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಕಾನೂನು ಮತ್ತುಇತರ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಶೇ 7.5ರಷ್ಟು ಕೋಟಾ ಮೀಸಲಿಟ್ಟಿದೆ.

ADVERTISEMENT

ಇಲ್ಲಿ 50 ಎಂಜಿನಿಯರಿಂಗ್ ಶಿಕ್ಷಣ ಆಕಾಂಕ್ಷಿಗಳಿಗೆ ಪ್ರವೇಶದ ಆದೇಶ ಪತ್ರ ವಿತರಿಸಿದ ಸ್ಟಾಲಿನ್, ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಬಯಸುವ 10,000 ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ಮೀಸಲಾತಿ ಪ್ರಯೋಜನ ಪಡೆಯಲಿದ್ದಾರೆ. ಇತರ 350 ಮಂದಿ ಕೃಷಿ, ಪಶುವೈದ್ಯಕೀಯ, ಮೀನುಗಾರಿಕೆ ಮತ್ತು ಕಾನೂನು ಕೋರ್ಸ್‌ಗಳಿಗೆ ಮೀಸಲಾತಿ ಅಡಿ ಪ್ರವೇಶ ಪಡೆದಿದ್ದಾರೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಖಾತ್ರಿಪಡಿಸುವ ಡಿಎಂಕೆ ಸರ್ಕಾರದ ಪ್ರಯತ್ನದ ಭಾಗವಾಗಿ ಈ ಮೀಸಲಾತಿ ಜಾರಿಗೆ ತರಲಾಗಿದೆ. ಸರ್ಕಾರಿ ಶಾಲೆಗಳಲ್ಲಿ 6ರಿಂದ ದ್ವಿತೀಯ ಪಿಯುಸಿಯವರೆಗೆ ಓದಿದ ವಿದ್ಯಾರ್ಥಿಗಳು ಹೊಸ ಕೋಟಾದ ಪ್ರಯೋಜನ ಪಡೆಯಲಿದ್ದಾರೆ ಎಂದು ಸ್ಟಾಲಿನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.