ADVERTISEMENT

ಉತ್ತರ ಪ್ರದೇಶ: ಅತ್ಯಾಚಾರಕ್ಕೀಡಾಗಿದ್ದ ಅಪ್ರಾಪ್ತೆ ಸಾವು, ಪ್ರಿಯಾಂಕಾ ಗಾಂಧಿ ಕಿಡಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 5:02 IST
Last Updated 13 ಮಾರ್ಚ್ 2020, 5:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಅತ್ಯಾಚಾರಕ್ಕೊಳಗಾಗಿದ್ದ ಮತ್ತು ಕತ್ತು ಹಿಸುಕಿದ ಸ್ಥಿತಿಯಲ್ಲಿ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮದ ಹೊರಗೆ ಪತ್ತೆಯಾಗಿದ್ದ 9 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.

ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 10ರಂದು ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಬಳಿಕ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಐಜಿಪಿ ಜ್ಯೋತಿ ನಾರಾಯಣ್ ತಿಳಿಸಿದ್ದಾಗಿ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಅಪ್ರಾಪ್ತೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಮತ್ತು ಶ್ವಾನದಳವು ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ADVERTISEMENT

ಮಾರ್ಚ್ 10ರಂದು ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು ಮತ್ತು ಬಾಲಕಿಯು ಗ್ರಾಮದ ಹೊರಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಳು. ಕೂಡಲೇ ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ಕಾನ್ಪುರದ ಹಾಲತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಗಳಿಂದ ಬಳಲುತ್ತಿದ್ದ ಬಾಲಕಿ ಗುರುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾಳೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಆಳ್ವಿಕೆಯಲ್ಲಿ ಅತಿ ಹೆಚ್ಚಿನ ಅಪರಾಧ ಪ್ರಕರಣಗಳು ವರದಿಯಾಗಿವೆ. ಒಂಬತ್ತು ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದಾಳೆ. ಇದಕ್ಕೆ ಕೊನೆಯಿಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.