ADVERTISEMENT

ಒಡಿಶಾ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಿಟಿಐ
Published 3 ಸೆಪ್ಟೆಂಬರ್ 2022, 2:54 IST
Last Updated 3 ಸೆಪ್ಟೆಂಬರ್ 2022, 2:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಟಕ್: ಒಡಿಶಾದ ಕಟಕ್‌ನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಗೆ 49 ವರ್ಷ ವಯಸ್ಸಾಗಿತ್ತು. ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿವೆ ಎಂದು ಕಟಕ್ ನಗರ ವಲಯ 3ರ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಹೇಳಿದ್ದಾರೆ.

ಘಟನೆ ನಡೆದಾಗ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಮಕ್ಕಳು ಶಾಲೆಗೆ ಹೋಗಿದ್ದರು. ಕಳೆದೆರಡು ದಿನಗಳಿಂದ ರಜೆಯಲ್ಲಿದ್ದ ನ್ಯಾಯಾಧೀಶರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಕ್‌ನ ಎಸ್‌‍ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.