ಎಎಪಿ ಮತ್ತು ಬಿಜೆಪಿ
ನವದೆಹಲಿ: ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಬಿಜೆಪಿ ಘೋಷಿಸಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿದ್ದು, ಮಹಿಳೆಯರಿಗೆ 'ದ್ರೋಹ’ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆಕ್ರೋಶ ವ್ಯಕ್ತಪಡಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಶಾಸಕ ಕುಲದೀಪ್ ಕುಮಾರ್, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲಿಯೇ ಪ್ರತಿ ತಿಂಗಳು ಮಹಿಳೆಯರಿಗೆ ಮಾಸಿಕ ₹2,500 ನೀಡುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ತಿಳಿಸಿತ್ತು. ಆದರೆ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಮೊದಲ ಅಧಿವೇಶದಲ್ಲಾದರೂ ಈ ಬಗ್ಗೆ ಪ್ರಸ್ತಾಪಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅಧಿವೇಶನದಲ್ಲಿ ಕೇವಲ ಅರವಿಂದ ಕೇಜ್ರಿವಾಲ್ ಅವರನ್ನು ನಿಂದಿಸುವಲ್ಲಿಯೇ ನಿರತವಾಗಿತ್ತು ಎಂದು ಆರೋಪಿಸಿದ್ದಾರೆ.
ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 8ರ ಒಳಗೆ ಮಹಿಳೆಯರಿಗೆ ಪ್ರತಿ ತಿಂಗಳು ₹2,500 ನೀಡುವುದಾಗಿ ರೇಖಾ ಗುಪ್ತಾ ನೇತೃತ್ವದ ಸರ್ಕಾರ ಹೇಳಿತ್ತು. ಆದರೆ ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕುಲದೀಪ್ ಟೀಕಿಸಿದ್ದಾರೆ.
ಮಹಿಳೆಯರಿಗೆ ಗೌರವಧನದ ರೂಪದಲ್ಲಿ ₹2,500 ನೀಡುವುದರ ಕುರಿತು ಸರ್ಕಾರ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು. ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರ ವೇಳೆ ಅಧಿಕಾರಕ್ಕೆ ಬಂದರೆ ಬಿಜೆಪಿ ಮಹಿಳೆಯರಿಗೆ ₹2,500 ಮತ್ತು ಎಎಪಿ 2,100 ನೀಡುವುದಾಗಿ ಭರವಸೆ ನೀಡಿದ್ದವು.
70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎಎಪಿ 22 ಸ್ಥಾನಗಳನ್ನು ಗಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.