ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಎಎಪಿ ಕಾರ್ಯಕರ್ತರು
ಪಿಟಿಐ
ಮುಂಬೈ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಮುಂಬೈನ ದಾದರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದು, ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷೆ ಸಂಸ್ಥೆ(ಎನ್‌ಟಿಎ) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಎಪಿಯ ಯುವ ಮತ್ತು ವಿದ್ಯಾರ್ಥಿ ಘಟಕದ ಸದಸ್ಯರು ನವದೆಹಲಿಯಲ್ಲಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.
‘ನೀಟ್ ಹಗರಣ ಕೇವಲ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಲ್ಲ. ಇದು ದೇಶದ ಯುವ ಜನತೆಯ ಭವಿಷ್ಯಕ್ಕೆ ಸಂಬಂಧಿಸಿದ್ದು’ ಎಂದು ಎಎಪಿಯ ಮುಂಬೈ ಘಟಕದ ಕಾರ್ಯಾಧ್ಯಕ್ಷ ರೂಬೆನ್ ಹೇಳಿದರು.
‘ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಬಿಜೆಪಿಯ ಕೆಲವರು ಹಗರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು’ ಎಂದರು.
ಎಎಪಿ ಮುಂಬೈ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ
‘ನೀಟ್ ಹಗರಣ ಇಡಿ ದೇಶವೇ ತಲೆತಗ್ಗಬೇಕಾದ ಸಂಗತಿ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಮುಂಬೈ ಘಟಕದ ಉಪಾಧ್ಯಕ್ಷ ಸಂದೀಪ್ ಕಟ್ಕೆ ಹೇಳಿದ್ದಾರೆ.
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿತ್ತು. ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 14ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ಎನ್‌ಟಿಎ ಜೂನ್ 4ರಂದೇ ಫಲಿತಾಂಶ ಪ್ರಕಟಿಸಿತ್ತು.
ಹರಿಯಾಣದಫರಿದಾದ್‌ನ ಕೇಂದ್ರದ ಆರು ಮಂದಿ ಸೇರಿ ದೇಶದಾದ್ಯಂತ 67 ಅಭ್ಯರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದು ಅಗ್ರ ಸ್ಥಾನ ಹಂಚಿಕೊಂಡಿದ್ದರು. ಕೆಲ ಅಭ್ಯರ್ಥಿಗಳಿಗೆ ಕೃಪಾಂಕವನ್ನು ಎನ್‌ಟಿಎ ನೀಡಿದ್ದು ಮತ್ತು ಒಂದೇ ಕೇಂದ್ರದ ಕೆಲವರು ಗರಿಷ್ಠ ಅಂಕಗಳನ್ನು ಗಳಿಸಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.