ADVERTISEMENT

ಅಬಕಾರಿ ನೀತಿ ಬಗ್ಗೆ ತನಿಖೆಗೆ ಗವರ್ನರ್ ಶಿಫಾರಸು; ಸಂಸತ್ತಿನಲ್ಲಿ ಎಎಪಿ ಪ್ರತಿಭಟನೆ

ಐಎಎನ್ಎಸ್
Published 25 ಜುಲೈ 2022, 6:16 IST
Last Updated 25 ಜುಲೈ 2022, 6:16 IST
   

ನವದೆಹಲಿ: ದೆಹಲಿ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಸರ್ಕಾರದ 'ಅಬಕಾರಿ ನೀತಿ 2021–22' ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಶಿಫಾರಸು ಮಾಡಿದ್ದಾರೆ. ಈ ಕುರಿತು ಆಮ್‌ ಆದ್ಮಿ ಪಕ್ಷ (ಎಎಪಿ) ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯಸಭೆ ಕಲಾಪ ಸ್ಥಗಿತಗೊಳಿಸುವಂತೆ ಆಗ್ರಹಿಸಿದೆ.

ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ತನಿಖಾ ದಳ (ಸಿ.ಬಿ.ಐ) ಮತ್ತು ಜಾರಿ ನಿರ್ದೇಶನಾಲಯಗಳನ್ನು (ಇ.ಡಿ.) ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಎಎಪಿಯ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್‌,ನಿಯಮ 267ರ ಅಡಿಯಲ್ಲಿ ಕಲಾಪ ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ.

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ನಿಯಮ ಉಲ್ಲಂಘನೆ ಹಾಗೂ ಕಾರ್ಯವಿಧಾನದಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಸರ್ಕಾರದ ಅಬಕಾರಿ ನೀತಿ 2021–22 ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ಇಲಾಖೆಯಲ್ಲಿನ ಭ್ರಷ್ಟಾಚಾರದಲ್ಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಕೇಜ್ರಿವಾಲ್‌ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಲೆಫ್ಟಿನೆಂಟ್ ಗವರ್ನರ್ ಅವರ ಕ್ರಮವನ್ನು ಎಎಪಿ ಟೀಕಿಸಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಅಬಕಾರಿ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಸಿಸೋಡಿಯಾ ಅವರನ್ನು ಸಿಲುಕಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.