ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ನವದೆಹಲಿ: ದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂದಿರುವ ಸಮನ್ಸ್‌ಗೆ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನಿನ ಪ್ರಕಾರ ನಡೆದುಕೊಳ್ಳಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಜನವರಿ 3ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಜಾರಿ ನಿರ್ದೇಶನಾಲಯ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ ಮುಂದೆ ಕೇಜ್ರಿವಾಲ್ ಹಾಜರಾಗಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಕ್ಕರ್, ‘ಇದಕ್ಕೆ ಉತ್ತರಿಸಲು ನಮ್ಮ ಕಾನೂನು ತಂಡ ಸಮರ್ಥ. ಕಾನೂನಿಯ ಅನ್ವಯ ನಾವು ನಡೆದುಕೊಳ್ಳುತ್ತೇವೆ’ ಎಂದು ಹೇಳಿದರು.
ಪ್ರಕರಣ ಸಂಬಂಧ ಇದು ಕೇಜ್ರಿವಾಲ್ ಅವರಿಗೆ ಇ.ಡಿ ನೀಡಿದ ಮೂರನೇ ನೋಟಿಸ್ ಇದಾಗಿದೆ. ಈ ಹಿಂದೆ ನವೆಂಬರ್ 21 ಹಾಗೂ ಡಿಸೆಂಬರ್ 2ರಂದು ವಿಚಾರಣೆಗೆ ಬರಬೇಕು ಎಂದು ನೋಟಿಸ್ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದರು.
ಈ ನೋಟಿಸ್ ರಾಜಕೀಯ ಪ್ರೇರಿತ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.