ADVERTISEMENT

ಅಹಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಎಂಟು ರೋಗಿಗಳು ಸಾವು

ಪಿಟಿಐ
Published 6 ಆಗಸ್ಟ್ 2020, 4:12 IST
Last Updated 6 ಆಗಸ್ಟ್ 2020, 4:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಗುರುವಾರ ತಿಳಿಸಿದ್ದಾರೆ.

ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್‌ನ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಗುರುವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಕೋವಿಡ್-19 ರೋಗಿಗಳನ್ನು ರಕ್ಷಿಸಲಾಗಿದ್ದು, ಅವರನ್ನು ನಗರದ ನಾಗರಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ADVERTISEMENT

ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ದಾಖಲಾದ ಎಂಟು ಕೊರೊನಾ ವೈರಸ್ ರೋಗಿಗಳು ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಐಸಿಯು ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ ಎಂದು ಅಹಮದಾಬಾದ್ ಅಗ್ನಿಶಾಮಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1,073 ಹೊಸ ಕೊರೊನಾ ವೈರಸ್ ಪ್ರಕರಣಗಳೊಂದಿಗೆ, ಗುಜರಾತ್‌ನಲ್ಲಿ ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆಯು ಬುಧವಾರ 66,777ಕ್ಕೆ ಏರಿಕೆಯಾಗಿದೆ. ಈವರೆಗೂ 2,557 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಬೇಸರವಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಮಾತನಾಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ ಬೆಂಕಿ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.