ADVERTISEMENT

Ahmedabad Plane Crash: ವಿಮಾನ ಪತನಕ್ಕೆ ಸಿದ್ದರಾಮಯ್ಯ ಸೇರಿ ಗಣ್ಯರ ಆಘಾತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2025, 10:46 IST
Last Updated 12 ಜೂನ್ 2025, 10:46 IST
   

ಬೆಂಗಳೂರು: ಲಂಡನ್‌ಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದಕ್ಕೆ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಕ್ಷಣ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಪ್ರತಿಕ್ರಿಯಿಸಿ, ‘ವರದಿಯಿಂದ ತೀವ್ರ ಆತಂಕಕ್ಕೊಳಗಾಗಿದ್ದೇನೆ. ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ADVERTISEMENT

ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಘಾತ ವ್ಯಕ್ತಪಡಿಸಿದ್ದು, ‘ಅಪಘಾತಕ್ಕೀಡಾದ ವಿಮಾನದಲ್ಲಿದ್ದವರು ಸುರಕ್ಷಿತವಾಗಿ ಮರಳಲಿ ಎಂಬುದಷ್ಟೇ ಇಡೀ ಭಾರತದ ನಿರೀಕ್ಷಿಸುತ್ತಿದೆ. ಎಲ್ಲರೊಂದಿಗೂ ದೇವರು ಇರಲಿ’ ಎಂದು ಪ್ರಾರ್ಥಿಸಿದ್ದಾರೆ.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ‘1950ರಲ್ಲಿ ರೈಲು ಹಳಿತಪ್ಪಿ ದುರಂತ ಸಂಭವಿಸಿತ್ತು. ಅಂದು ಲಾಲ್‌ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ರಾಜೀನಾಮೆ ಸಲ್ಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.