ADVERTISEMENT

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ: ಇಂದು ಶಾಸಕಾಂಗ ಪಕ್ಷದ ಸಭೆ

ಪಿಟಿಐ
Published 18 ಸೆಪ್ಟೆಂಬರ್ 2021, 7:11 IST
Last Updated 18 ಸೆಪ್ಟೆಂಬರ್ 2021, 7:11 IST
ನವಜೋತ್ ಸಿಂಗ್ ಸಿಧು ಹಾಗೂ ಅಮರಿಂದರ್ ಸಿಂಗ್
ನವಜೋತ್ ಸಿಂಗ್ ಸಿಧು ಹಾಗೂ ಅಮರಿಂದರ್ ಸಿಂಗ್   

ಚಂಡೀಗಡ: ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಶನಿವಾರ ಪಂಜಾಬ್ ಕಾಂಗ್ರೆಸ್‌‌ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ತುರ್ತಾಗಿ ಪಂಜಾಬ್ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಸಭೆಯು ಶನಿವಾರ ಸಂಜೆ 5 ಗಂಟೆಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಹರೀಶ್ ರಾವತ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ಮತ್ತು ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗೆ ಟ್ಯಾಗ್ ಮಾಡಿದ್ದಾರೆ.

ಸಿಧುಗೆ ಆಪ್ತರಾದ ಶಾಸಕರು ಮತ್ತು ಸಚಿವರು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲು ಬೇಡಿಕೆಇಟ್ಟಿದ್ದರು ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ನಾಲ್ವರು ಸಚಿವರು ಮತ್ತು ಹಲವಾರು ಶಾಸಕರು ಅಮರಿಂದರ್ ಸಿಂಗ್ ವಿರುದ್ಧ ಬಂಡಾಯದ ಬಾವುಟವನ್ನು ಹಾರಿಸಿದ್ದರು. ಈಗ ಭಿನ್ನಮತ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ನಿರ್ಣಾಯಕ ಸಭೆ ಕರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.