ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ಸ್ಥಳದಿಂದ ತೆರವು ಮಾಡುವ ಕಾರ್ಯಾಚರಣೆಯನ್ನು ನಡೆಸಲಾಯಿತು
– ಪಿಟಿಐ ಚಿತ್ರ
ಪುಣೆ: ಜೂನ್ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ 787–8 ವಿಮಾನದ ಬ್ಲ್ಯಾಕ್‌ಬಾಕ್ಸ್‌ಗಳನ್ನು ವಿಮಾನ ಅಪಘಾತ ತನಿಖಾ ಸಂಸ್ಥೆಯು (ಎಎಐಬಿ) ಪರಿಶೀಲಿಸುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್‌ಬಾಕ್ಸ್‌ಗಳನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದಾರೆ. ಸದ್ಯ ಬ್ಲ್ಯಾಕ್‌ಬಾಕ್ಸ್‌ಗಳು ಭಾರತದಲ್ಲೇ ಇವೆ ಮತ್ತು ವಿಮಾನ ಅಪಘಾತ ತನಿಖಾ ಸಂಸ್ಥೆಯೇ ತನಿಖೆ ನಡೆಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
‘ಬ್ಲ್ಯಾಕ್‌ಬಾಕ್ಸ್‌ಗಳ ಡೇಟಾವನ್ನು ಯಾವಾಗ ಪಡೆಯಲಾಗುವುದು ಎಂಬ ಪ್ರಶ್ನೆಗೆ ಉತ್ತರಿಸಿದ ನಾಯ್ಡು, ‘ಇದು ತಾಂತ್ರಿಕ ವಿಷಯವಾಗಿದೆ. ಬ್ಲ್ಯಾಕ್‌ಬಾಕ್ಸ್ ಅನ್ನು ಡಿಕೋಡ್ ಮಾಡುವುದರಿಂದ ವಿಮಾನ ಅಪಘಾತಕ್ಕೂ ಕೆಲವೇ ಕ್ಷಣಗಳ ಮೊದಲು ಏನಾಯಿತು ಎಂಬುದರ ಕುರಿತು ಸ್ಪಷ್ಟನೆ ಸಿಗಲಿದೆ’ ಎಂದಿದ್ದಾರೆ.
‘ಸ್ಥಳೀಯ ಅಧಿಕಾರಿಗಳು ಮತ್ತು ಏಜೆನ್ಸಿಗಳ ಸಂಪೂರ್ಣ ಬೆಂಬಲದೊಂದಿಗೆ ಎಎಐಬಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಸ್ಥಳ ಪರಿಶೀಲನೆ ಮತ್ತು ಸಾಕ್ಷ್ಯ ಸಂಗ್ರಹ ಸೇರಿದಂತೆ ಪ್ರಮುಖ ಕೆಲಸಗಳು ಪೂರ್ಣಗೊಂಡಿದ್ದು, ಈಗ ಹೆಚ್ಚಿನ ವಿಶ್ಲೇಷಣೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.
‘ಎಲ್ಲಾ ತಾಂತ್ರಿಕ, ಸುರಕ್ಷತಾ ಮತ್ತು ಭದ್ರತೆಯ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸೂಕ್ತ ಮೌಲ್ಯಮಾಪನದ ನಂತರ ಬ್ಲ್ಯಾಕ್‌ಬಾಕ್ಸ್‌ಗಳ ವಿಶ್ಲೇಷಣೆ ಎಲ್ಲಿ ಮಾಡಬೇಕು ಎಂಬ ನಿರ್ಧಾರವನ್ನು ಎಎಐಬಿ ತೆಗೆದುಕೊಳ್ಳುತ್ತದೆ’ ಎಂದಿರುವ ಅವರು, ಇಂತಹ ‘ಸೂಕ್ಷ್ಮ’ ವಿಷಯಕ್ಕೆ ಸಂಬಂಧಿಸಿದಂತೆ ಊಹಾಪೋಹಗಳಿಂದ ದೂರವಿರುವಂತೆ ಮನವಿ ಮಾಡಿದ್ದಾರೆ.
ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ವಿಮಾನದಲ್ಲಿದ್ದ 242 ಮಂದಿಯ ಪೈಕಿ 241 ಮಂದಿ ಮೃತಪಟ್ಟಿದ್ದರು. ವಿಮಾನ ಡಿಕ್ಕಿ ಹೊಡೆದ ಸ್ಥಳದಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿ 29 ಮಂದಿ ಸಾವಿಗೀಡಾಗಿದ್ದರು.
ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅವರು ಈಚೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.