ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ಸ್ಥಳದಿಂದ ತೆರವು ಮಾಡುವ ಕಾರ್ಯಾಚರಣೆಯನ್ನು ನಡೆಸಲಾಯಿತು
– ಪಿಟಿಐ ಚಿತ್ರ
ನವದೆಹಲಿ: ಗುಜರಾತ್‌ನ ಅಹಮದಾಬಾದ್ ಹೊರವಲಯದ ಬಿ.ಜೆ ವೈದ್ಯಕೀಯ ಕಾಲೇಜಿನ ಮೇಲೆ ಪತನಗೊಂಡಿದ್ದ ಏರ್ ಇಂಡಿಯಾ ಬೋಯಿಂಗ್ 787–8 ವಿಮಾನದ ಎರಡನೇ ಬ್ಲ್ಯಾಕ್‌ಬಾಕ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ವಿಮಾನದಲ್ಲಿ ಎರಡು ಬ್ಲ್ಯಾಕ್‌ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ‘ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್’ ಭಾನುವಾರ ಪತ್ತೆಯಾಗಿದೆ. ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್‌ಗಳನ್ನು ಸುರಕ್ಷಿತವಾಗಿರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದಾರೆ.
ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಮಿಶ್ರಾ ಅವರು ಅಹಮದಾಬಾದ್‌ನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರ, ವೈಮಾನಿಕ ಅಪಘಾತ ತನಿಖಾ ಮಂಡಳಿ (ಎಎಐಬಿ) ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಪರಿಹಾರ, ರಕ್ಷಣೆ ಮತ್ತು ತನಿಖೆ ಕುರಿತು ಚರ್ಚೆ ನಡೆಸಿದ್ದಾರೆ.
ಜೂನ್ 12ರಂದು (ಗುರುವಾರ) ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ವಿಮಾನದಲ್ಲಿದ್ದ 242 ಮಂದಿಯ ಪೈಕಿ 241 ಮಂದಿ ಮೃತಪಟ್ಟಿದ್ದಾರೆ. ವಿಮಾನ ಡಿಕ್ಕಿ ಹೊಡೆದ ಸ್ಥಳದಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿ 29 ಮಂದಿ ಮೃತ ಪಟ್ಟಿದ್ದಾರೆ.
ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.