ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ಘಟನೆ ಬೆನ್ನಲ್ಲೇ ಏರ್ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿದೆ.
ಸಂಸ್ಥೆಯು ತನ್ನ ಎಕ್ಸ್ ಖಾತೆ, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರೊಫೈಲ್ ಚಿತ್ರವನ್ನು ಕಪ್ಪು ಐಕಾನ್‌ಗೆ ಬದಲಾಯಿಸಿದೆ.
ವಿಮಾನಯಾನ ಸಂಸ್ಥೆಯು ತನ್ನ ವೆಬ್‌ಸೈಟ್‌ನ ಮುಖಪುಟವನ್ನು ಕಪ್ಪು ಮತ್ತು ಬಿಳಿ ಬಣ್ಣಕ್ಕೆ ಬದಲಾಯಿಸಿದೆ. ಅಲ್ಲದೇ ಅದರ ಮೇಲೆ '1800 5691 444 for Flight AI171' ತುರ್ತು ಸಹಾಯವಾಣಿ ಸಂಖ್ಯೆಯನ್ನು ಬರೆಯಲಾಗಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ AI171 ವಿಮಾನ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಂಸ್ಥೆ, 12 ವರ್ಷ ಹಳೆಯ ಬೋಯಿಂಗ್ 787-8 ವಿಮಾನವು ಜೂನ್ 12ರ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಯಿತು. ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ನಾವು ವಿಷಾದಿಸುತ್ತೇವೆ. ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಮೃತ ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಹಾಗೂ ಓರ್ವ ಕೆನಡಾದ ಪ್ರಜೆ ಸೇರಿದ್ದಾರೆ ಎಂದು ಸಂಸ್ಥೆ ಹೇಳಿದೆ.
ಏರ್ ಇಂಡಿಯಾ ‘1800 5691 444‘ ಸಹಾಯವಾಣಿಯನ್ನು ಆರಂಭಿಸಿದೆ. ಭಾರತದ ಹೊರಗಿನಿಂದ ಕರೆ ಮಾಡುವವರು +91 8062779200ಗೆ ಕರೆ ಮಾಡಬಹುದು ಎಂದೂ ಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.