ADVERTISEMENT

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಮೂವರು ಸಿಬ್ಬಂದಿ ವಿಚಾರಣೆಗೆ ಹಾಜರು

ಪಿಟಿಐ
Published 7 ಜನವರಿ 2023, 11:09 IST
Last Updated 7 ಜನವರಿ 2023, 11:09 IST
   

ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕನೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾ ವಿಮಾನದ ಮೂವರು ಸಿಬ್ಬಂದಿ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 9 ಸಿಬ್ಬಂದಿಯನ್ನು ವಿಚಾರಣೆಗೆ ಕರೆಯಲಾಗಿದ್ದು, ಈ ಪೈಕಿ ಮೂವರ ಹೇಳಿಕೆಗಳನ್ನು ಶನಿವಾರ ಬೆಳಗ್ಗೆ ದಾಖಲಿಸಿಕೊಳ್ಳಲಾಗಿದೆ. ಈ ಹೇಳಿಕೆಗಳು ಕಳೆದ ನವೆಂಬರ್‌ನಲ್ಲಿ ನಡೆದ ಪ್ರಕರಣದ ತನಿಖೆಗೆ ನೆರವಾಗಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಬ್ಬಂದಿಯನ್ನು ಶುಕ್ರವಾರವೇ ವಿಚಾರಣೆಗೆ ಕರೆಯಲಾಗಿತ್ತು. ಆದರೆ, ಅವರೆಲ್ಲ ನಗರದಲ್ಲಿ ಇರದಿದ್ದ ಕಾರಣ ಶನಿವಾರ ಹಾಜರಾಗಿದ್ದಾರೆ.

ADVERTISEMENT

2022ರ ನವೆಂಬರ್‌ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಎಂಬಾತ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ್ದ. ವಿಮಾನ ಲ್ಯಾಂಡ್‌ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಈ ಘಟನೆ ನಡೆದಿತ್ತು.

ಮಹಿಳೆ ಏರ್‌ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಇಂದು (ಶನಿವಾರ) ಬಂಧಿಸಿ ದೆಹಲಿಗೆ ಕರೆತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.