
ಪ್ರಧಾನಿ ನರೇಂದ್ರ ಮೋದಿ ಮತ್ತು ಅಜಿತ್ ಪವಾರ್
ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಿಂದ ದುಃಖಿತನಾಗಿದ್ದೇನೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾನಿದ್ದೇನೆ. ಈ ತೀವ್ರ ದುಃಖದ ಕ್ಷಣದಲ್ಲಿ ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಜನನಾಯಕರಾಗಿದ್ದರು. ತಳಮಟ್ಟದ ಸಂಪರ್ಕ ಹೊಂದಿದ್ದರು. ರಾಜ್ಯದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವ ಅವರದ್ದಾಗಿತ್ತು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು, ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ಮೋದಿ ತಿಳಿಸಿದ್ದಾರೆ.
‘ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಡಿಎ ಮೈತ್ರಿಕೂಟದಲ್ಲಿ ಪ್ರಮುಖ ಪಾಲುದಾರರಾದ ಅಜಿತ್ ಪವಾರ್ ಜಿ ಅವರ ನಿಧನದ ಸುದ್ದಿ ತಿಳಿದು ನಾನು ತುಂಬಾ ದುಃಖಿತನಾಗಿದ್ದೇನೆ. ಕಳೆದ ಮೂರೂವರೆ ದಶಕಗಳಲ್ಲಿ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ರೀತಿ, ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಅವರು ಭೇಟಿಯಾದಾಗಲೆಲ್ಲಾ ಮಹಾರಾಷ್ಟ್ರದ ಜನರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸುತ್ತಿದ್ದರು. ಅವರ ನಿಧನದಿಂದ ಎನ್‌ಡಿಎ ಮೈತ್ರಿಕೂಟ ಮತ್ತು ನನಗೆ ವೈಯಕ್ತಿಕ ನಷ್ಟವಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಪವಾರ್ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ ಇಡೀ ಎನ್‌ಡಿಎ ಮೈತ್ರಿಕೂಟ ಪವಾರ್ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಗಲಿದ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ’ ಎಂದೂ ಶಾ ತಿಳಿಸಿದ್ದಾರೆ.
‘ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ನೋವುಂಟಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಬದ್ಧರಾಗಿದ್ದರು. ಅವರು ಜನರ ಬಗ್ಗೆ ಸಹಾನುಭೂತಿ ಮತ್ತು ಸಾರ್ವಜನಿಕ ಸೇವೆಗೆ ಅಚಲ ಸಮರ್ಪಣೆಗೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು. ಮಹಾರಾಷ್ಟ್ರದ ಪ್ರಭಾವಿ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸುನೇತ್ರಾ ಪವಾರ್, ಸುಪುತ್ರ ಪಾರ್ಥ್ ಪವಾರ್ ಮತ್ತು ಇಡೀ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ ಮುಂಬೈಯಿಂದ ಬಾರಾಮತಿಗೆ ಹೊರಟಿದ್ದ ವೇಳೆ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಭದ್ರತಾ ಅಧಿಕಾರಿ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.