ADVERTISEMENT

EWSಗೆ ಶೇ 10ರಷ್ಟು ಮೀಸಲಾತಿ: ತಿದ್ದುಪಡಿ ತಿರಸ್ಕರಿಸಿದ ತಮಿಳುನಾಡು ಸರ್ವಪಕ್ಷ ಸಭೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ

ಪಿಟಿಐ
Published 12 ನವೆಂಬರ್ 2022, 12:21 IST
Last Updated 12 ನವೆಂಬರ್ 2022, 12:21 IST
ಎಂ.ಕೆ. ಸ್ಟಾಲಿನ್
ಎಂ.ಕೆ. ಸ್ಟಾಲಿನ್   

ಚೆನ್ನೈ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್‌) ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿಯನ್ನು ಶನಿವಾರ ಇಲ್ಲಿ ನಡೆದ ಸರ್ವಪಕ್ಷಗಳ ಸಭೆ ತಿರಸ್ಕರಿಸಿತು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು, ‘ಇಡಬ್ಲ್ಯುಎಸ್‌ನವರಿಗೆ ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿ ಬಡವರಲ್ಲಿ ಜಾತಿ ತಾರತಮ್ಯಕ್ಕೆ ಕಾರಣವಾಗಿದೆ’ ಎಂದು ಪ್ರತಿಪಾದಿಸಿತು.

‘ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಪಕ್ಷಗಳು ಈ ವಿಷಯಕ್ಕೆ ಸಂಬಂಧಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದವು’ ಎಂದು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಹಾಗೂ ಅದರ ಮಿತ್ರಪಕ್ಷ ಬಿಜೆಪಿ ಈ ಸಭೆಯನ್ನು ಬಹಿಷ್ಕರಿಸಿದ್ದವು. ಅಲ್ಲದೇ, ಈ ತಿದ್ದುಪಡಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗುವ ಮರುಪರಿಶೀಲನಾ ಅರ್ಜಿಯಲ್ಲಿ ಈ ಕುರಿತು ದೃಢವಾದ ಅಭಿಪ್ರಾಯಗಳನ್ನು ದಾಖಲಿಸುವಂತೆ ಈ ಎರಡು ಪಕ್ಷಗಳು ಒತ್ತಾಯಿಸಿವೆ.

ಇಡಬ್ಲ್ಯುಎಸ್‌ನವರಿಗೆ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ಎತ್ತಿಹಿಡಿದು ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ನ್ಯಾಯಪೀಠ ನ. 8ರಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದಾಗಿ ಆಡಳಿತಾರೂಢ ಡಿಎಂಕೆ ಈಗಾಗಲೇ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.