ADVERTISEMENT

ಆಲಮಟ್ಟಿ ಅಣೆಕಟ್ಟೆ ಎತ್ತರಿಸಿದರೆ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ: ಮಹಾರಾಷ್ಟ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2025, 2:26 IST
Last Updated 12 ಸೆಪ್ಟೆಂಬರ್ 2025, 2:26 IST
<div class="paragraphs"><p>ಮಹಾರಾ‌ಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌</p></div>

ಮಹಾರಾ‌ಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌

   

ಮುಂಬೈ: ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗೊಳ್ಳುವ ಯಾವುದೇ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಹಾರಾ‌ಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಗುರುವಾರ ತಿಳಿಸಿದ್ದಾರೆ.

ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಫಡಣವೀಸ್‌, 'ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ' ಎಂದಿದ್ದಾರೆ. 

ADVERTISEMENT

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸಲು ಮತ್ತು ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಿಂದಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ, ಫಡಣವೀಸ್ ಹೇಳಿಕೆ ಹೊರಬಿದ್ದಿದೆ.

ಈ ವಿಚಾರದ ಕುರಿತು ಮಹಾರಾಷ್ಟ್ರ ಸರ್ಕಾರ ಕಳೆದ ತಿಂಗಳೇ ಕೇಂದ್ರದೊಂದಿಗೆ ಸಂವಹನ ನಡೆಸಿತ್ತು. ಫಡಣವೀಸ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌ ಅವರಿಗೆ ಪತ್ರ ಬರೆದಿದ್ದರು. ಅದಾದ ನಂತರ ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟಿಲ್‌ ನೇತೃತ್ವದ ನಿಯೋಗವು ದೆಹಲಿಗೆ ತೆರಳಿ ಕಳವಳ ವ್ಯಕ್ತಪಡಿಸಿತ್ತು.

ಕೃಷ್ಣಾ ನದಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಸತಾರಾ ಜಿಲ್ಲೆಯ ಮಹಾಬಲೇಶ್ವರದಲ್ಲಿ ಹುಟ್ಟುತ್ತದೆ. ಮಳೆಗಾಲದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತದೆ. ಇದಕ್ಕೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟೆಯ ಎತ್ತರ ಹೆಚ್ಚಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ ಎಂಬುದು ಮಹಾರಾಷ್ಟ್ರದ ವಾದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.