ಶ್ರೀನಗರ: ಜುಲೈ 3 ರಿಂದ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಹಿನ್ನೆಲೆ ಜಮ್ಮುವಿನಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದು, ತಪಾಸಣೆ ನಡೆಸಲು ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಯಾತ್ರಾರ್ಥಿಗಳ ಸುರಕ್ಷೆತೆಯ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರೆಸೇನಾ ಪಡೆಗಳು ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಯಾತ್ರಾರ್ಥಿಗಳಿಗೆ ಸುಗಮ ಯಾತ್ರೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ ಮತ್ತು ಮೂಲ ಶಿಬಿರವಾದ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್‌ಪೋಸ್ಟ್‌ಗಳು ನಿರ್ಮಿಸಿದ್ದು, ದಿನದ 24 ಗಂಟೆಗಳ ಕಾಲ ನಿಗಾ ವಹಿಸಲಾಗುವುದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೋಟೆಲ್‌ಗಳು, ಅತಿಥಿಗೃಹಗಳು ಮತ್ತು ವಸತಿಗೃಹಗಳಲ್ಲಿ ರ್‍ಯಾಂಡಮ್ (ಯಾದೃಚ್ಛಿಕ) ತಪಾಸಣೆ ನಡೆಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮರನಾಥ ಯಾತ್ರೆಗಾಗಿ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಿರುವುದಾಗಿ ಜಮ್ಮು–ಕಾಶ್ಮೀರ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿ ಬಳಿಕ ಅಮರನಾಥ ಯಾತ್ರೆಗೆ ನೋಂದಾಯಿಸಿಕೊಳ್ಳುವ ಭಕ್ತರ ಸಂಖ್ಯೆ ಶೇ 10ರಷ್ಟು ಇಳಿಕೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದರು.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.