ADVERTISEMENT

ಮೋದಿ ಬೆನ್ನಲ್ಲೇ ಕೇರಳಕ್ಕೆ ಅಮಿತ್ ಶಾ: ದಕ್ಷಿಣ ವಿಭಾಗೀಯ ಮಂಡಳಿ ಸಭೆಯಲ್ಲಿ ಭಾಗಿ

ಪಿಟಿಐ
Published 2 ಸೆಪ್ಟೆಂಬರ್ 2022, 10:30 IST
Last Updated 2 ಸೆಪ್ಟೆಂಬರ್ 2022, 10:30 IST
   

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಕೇರಳಕ್ಕೆ ಭೇಟಿ ನೀಡಲಿದ್ದು, ತಿರುವನಂತಪುರದಲ್ಲಿ ದಕ್ಷಿಣ ವಿಭಾಗೀಯ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ದಕ್ಷಿಣ ವಿಭಾಗೀಯ ಮಂಡಳಿ ಸಭೆಯಲ್ಲಿ ನದಿ ನೀರು ಹಂಚಿಕೆ, ಕರಾವಳಿ ಭದ್ರತೆ, ಸಂಪರ್ಕ ಹಾಗೂ ಸಾಮಾನ್ಯ ಹಿತಾಸಕ್ತಿಗೆ ಸಂಬಂಧಿಸಿದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ವಿಭಾಗೀಯ ಮಂಡಳಿಯು ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸತತವಾಗಿ ವಿಭಾಗೀಯ ಮಂಡಳಿಗಳ ಸಭೆ ನಡೆಸುತ್ತಿದೆ. ಸಹಕಾರ ಮತ್ತು ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಮತ್ತು ಈ ನಿಟ್ಟಿನಲ್ಲಿ ಉತ್ತೇಜನ ನೀಡುವ ಒಟ್ಟಾರೆ ಕಾರ್ಯತಂತ್ರದ ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಹಾಗೂ ಶುಕ್ರವಾರ ಕೇರಳಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. ದೇಶೀಯವಾಗಿ ನಿರ್ಮಿಸಲಾಗಿರುವ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಶುಕ್ರವಾರ ಚಾಲನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.