ಶಿವನ ದೇವಾಲಯ ಪತ್ತೆಯಾಗಿರುವ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು
-ಎಎನ್‌ಐ ಎಕ್ಸ್ (ಟ್ವಿಟರ್) ಚಿತ್ರ
ಲಖನೌ: ಉತ್ತರ ಪ್ರದೇಶದ ಸಂಭಲ್ ಜಿಲ್ಲೆಯ ಮೊಘಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ಪ್ರಾಚೀನ ಶಿವನ ದೇವಾಲಯ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಒತ್ತುವರಿ ತೆರವುಗೊಳಿಸುವಾಗ ಶಿವನ ದೇವಾಲಯ ಮತ್ತು ದೇವಾಲಯಕ್ಕೆ ಸೇರಿದ ಬಾವಿವೊಂದು ಪತ್ತೆಯಾಗಿದೆ ಸಂಭಲ್ ಜಿಲ್ಲಾಡಳಿತ ದೃಢಪಡಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
42 ವರ್ಷಗಳ ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ದೇವಾಲಯವನ್ನು ಸ್ವಚ್ಛಗೊಳಿಸಲಾಗುತ್ತಿದೆ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಕಾರ್ಯಾಚರಣೆ ನಡೆಸುತ್ತಿದ್ದಾಗ, ದೇವಸ್ಥಾನವನ್ನು ಅತಿಕ್ರಮಿಸಿರುವುದು ನಮ್ಮ ಗಮನಕ್ಕೆ ಬಂತು. ಕೂಡಲೇ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದು ಸಂಭಲ್ ಜಿಲ್ಲಾಧಿಕಾರಿ ರಾಜೇಂದ್ರ ಪೆಸಿಯಾ ‘ಎಎನ್‌ಐ’ಗೆ ತಿಳಿಸಿದ್ದಾರೆ.
ಶಿವನ ದೇವಾಲಯದ ಬಳಿ ಒಂದು ಬಾವಿ ಕೂಡ ಪತ್ತೆಯಾಗಿದೆ. ಬಾವಿಯ ಮೇಲೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, ದೇವಸ್ಥಾನದ ನಿರ್ವಹಣೆ ಮಾಡುವವರಿಗೆ ಬಾವಿಯನ್ನು ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಚೆಗೆ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರು ಭದ್ರತಾ ಸಿಬ್ಬಂದಿ ಜೊತೆ ಘರ್ಷಣೆಗಿಳಿದಿದ್ದರಿಂದ ಭುಗಿಲೆದ್ದ ಹಿಂಸಾಚಾರದಲ್ಲಿ ಆರು ಮಂದಿ ಮೃತಪಟ್ಟಿದ್ದರು.
ಪ್ರತಿಭಟನಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದಲ್ಲದೇ, ವಾಹನಗಳಿಗೆ ಬೆಂಕಿ ಹಚ್ಚಲು ಯತ್ನಿಸಿದ್ದರು. ಕೆಲ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದರು. ಉದ್ರಿಕ್ತರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಷೆಲ್‌ಗಳನ್ನು ಸಿಡಿಸಿದ್ದರು.
ಘಟನೆ ಸಂಬಂಧ, ಇಬ್ಬರು ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆಸಿಯಾ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.